ಬೆಂಗಳೂರು: ರಾಜ್ಯದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಸಂಘಟಿಸಿ ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ಆಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಫಲಾನುಭವಿ ಆಧಾರಿತ ಯೋಜನೆಗಳ ಎಲ್ಲಾ ಅರ್ಹ ಫಲಾನುಭವಿಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸ್ಥಳೀಯ ಶಾಸಕರುಗಳನ್ನೊಳಗೊಂಡಂತೆ ಫಲಾನುಭವಿಗಳ ಸಮ್ಮೇಳನವನ್ನು ಶೀಘ್ರವಾಗಿ ಆಯೋಜಿಸಲು ಸೂಚಿಸಲಾಗಿದೆ.
ದೇಶದ ಜನರ ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧವಾಗಿ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿವೆ. ಪ್ರಸ್ತುತ ಭಾರತ ಸರ್ಕಾರದ ಪ್ರಾಯೋಜಕತ್ವದ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಹಲವು ಯೋಜನೆಗಳ ಮೂಲಕ ಸಮಾಜದ ಕಟ್ಟ ಕಡೆಯ ನಾಗರಿಕರನ್ನು ತಲುಪಲು ಸರ್ಕಾರ ಅವಿರತವಾಗಿ ಕ್ರಮ ವಹಿಸಿದೆ ಎಂದು ತಿಳಿಸಲಾಗಿದೆ.
ಕೇಂದ್ರ ಸರ್ಕಾರದ ಪ್ರಾಯೋಜಿತ/ ಸ್ವಯಂ ರಾಜ್ಯ ಸರ್ಕಾರದ ಫಲಾನುಭವಿ ಆಧಾರಿತ ಹಲವು ಯೋಜನೆಗಳಗೆ ಸಂಪೂರ್ಣವಾಗಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾ ಮಟ್ಟದಲ್ಲಿ ಆಯಾ ಇಲಾಖೆಗಳ ಸಹಯೋಗದಲ್ಲಿ 'ಆಂದೋಲನ' ರೂಪದಲ್ಲಿ ಚಾಲನೆ ನೀಡಲು ತಿಳಿಸಿದೆ. ಈ ಪ್ರಕ್ರಿಯೆಯಲ್ಲಿ ಎಲ್ಲಾ ಫಲಾನುಭವಿ ಆಧಾರಿತ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದ್ದಾರೆ.
ಸರಕಾರದ ಯೋಜನೆಗಳು ಸಂಪೂರ್ಣವಾಗಿ ಎಲ್ಲಾ ಫಲಾನುಭವಿಗಳಿಗೆ ಮುಟ್ಟಬೇಕೆಂಬ ಉದ್ದೇಶದಿಂದ ಎಲ್ಲಾ ಜಿಲ್ಲೆಗಳಲ್ಲಿ ಅಭಿಯಾನ ಕೈಗೊಳ್ಳಲು ಮಾಡಲು ತೀರ್ಮಾನಿಸಲಾಗಿದೆ. ಸರ್ಕಾರದ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ ನೇರವಾಗಿ ಮುಟ್ಟಿಸಲು ಡಿಬಿಟಿ ವ್ಯವಸ್ಥೆಯಿಂದ ಮಧ್ಯವರ್ತಿಗಳ ಹಾವಳಿ ತಪ್ಪಿದ್ದು, ಜನರು ಕಚೇರಿಗಳಿಗೆ ಒಡಾಡುವುದನ್ನು ತಪ್ಪಿಸಲಾಗಿದೆ. ಪಿಎಂ ಸ್ವನಿಧಿ, ರೈತ ವಿಧ್ಯಾ ನಿಧಿ, ರೈತ ಶಕ್ತಿ ಯೋಜನೆಗಳು ಡಿಬಿಟಿ ಮುಖಾಂತರವಾಗಿ ಪಾವತಿಯಾಗುತ್ತಿದೆ. ಈ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಫಲಾನುಭವಿಗಳಿಗೆ ನೇರವಾಗಿ ಮುಟ್ಟಲು ಹಾಗೂ ಸೌಲಭ್ಯ ವಂಚಿತರಾದವರಿಗೆ ಕಾರ್ಯಕ್ರಮ ಮುಟ್ಟಿಸಲು ಕೂಡಲೇ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸ್ತ್ರೀ ಶಕ್ತಿ, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ, ಅಮೃತ ಯೋಜನೆಗಳನ್ನು ಜಾರಿಗೆ ತರಬೇಕಿದ್ದು, ಇದಕ್ಕೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಬಾಕಿ ಇರುವ ಫಲಾನುಭವಿಗಳನ್ನು ಗುರುತಿಸಿ ಫಲಾನುಭವಿಗಳಿಗೆ ಮುಟ್ಟಿಸುವ ಕೆಲಸವಾಗಬೇಕು. ಪ್ರತಿ ಜಿಲ್ಲೆಯಲ್ಲಿ ಜಾಗೃತಿ ಅಭಿಯಾನ ಕೈಗೊಂಡು ಒಂದು ಸಮ್ಮೇಳನ ಮಾಡುವ ಮುಖಾಂತರ ಯೋಜನೆಗಳನ್ನು ಮುಟ್ಟಿಸಲಾಗುವುದು. ಇದರಿಂದ ಅತ್ಯಂತ ತಳಸ್ತರದಲ್ಲಿವ ಜನರಿಗೆ ಮಾಹಿತಿ ತಲುಪಿಸುವ ಉದ್ದೇಶ ಬೊಮ್ಮಾಯಿ ಸರ್ಕಾರದ್ದಾಗಿದೆ. ಸಮ್ಮೇಳನಕ್ಕೆ ಮುಂಚೆ ಅಭಿಯಾನವಾದರೆ ಜನರಿಗೆ ಮಾಹಿತಿ ದೊರೆತು ಸೌಲಭ್ಯಗಳನ್ನು ಪಡೆಯಬಹುದು. ಈ ಅಭಿಯಾನ ಜಿಲ್ಲಾ ಉಸ್ತುವಾರಿ ಸಚಿವರು ನೇತೃತ್ವದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಶೇ.91 ರಷ್ಟು ರಾಜಸ್ವ ಸಂಗ್ರಹ, ಆಯವ್ಯಯದ ಶೇ 75 ರಷ್ಟು ವೆಚ್ಚ: ರಾಜ್ಯಪಾಲ ಗೆಹ್ಲೋಟ್