ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಬಂಧ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಂಗಳೂರು ನಗರ ವ್ಯಾಪ್ತಿಯ ಶಾಸಕರ ಸಭೆ ಕರೆದಿದ್ದಾರೆ.
ನಾಳೆ ಸಂಜೆ 6.30ಕ್ಕೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ ಶಿವಕುಮಾರ್ ನಿವಾಸದಲ್ಲಿ ಸಭೆ ನಡೆಯಲಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಸಹ ಸಭೆಗೆ ಆಹ್ವಾನಿಸಲಾಗಿದ್ದು, ಭಾಗವಹಿಸುವುದಾಗಿ ತಿಳಿಸಿದ್ದಾರೆ. ಬಿಬಿಎಂಪಿ ಚುನಾವಣಾ ತಯಾರಿ ಹಾಗೂ ಬೆಂಗಳೂರು ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಜೊತೆಗೆ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವ ಕುರಿತು ನಾಳಿನ ಸಭೆಯಲ್ಲಿ ಚರ್ಚೆ ಆಗಲಿದೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪಕ್ಷದ ಹಿರಿಯ ನಾಯಕರ ಜೊತೆ ಹಂತ-ಹಂತವಾಗಿ ತಮ್ಮ ನಿವಾಸಗಳಲ್ಲಿ ಸಭೆ ನಡೆಸುತ್ತಿದ್ದಾರೆ. ಕಳೆದ ಒಂದೆರಡು ವಾರಗಳಿಂದ ನಿರಂತರವಾಗಿ ಡಿಕೆಶಿ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು, ಮಾಜಿ ಸಚಿವರು, ಶಾಸಕರು ಹಾಗೂ ಮಾಜಿ ಶಾಸಕರ ಜೊತೆ ಸಭೆ ನಡೆಸಿದ್ದಾರೆ. ಕಳೆದೆರಡು ದಿನಗಳಿಂದ ಪ್ರತಿಪಕ್ಷನಾಯಕ ಸಿದ್ದರಾಮಯ್ಯ ಸರಣಿ ಸಭೆಗಳನ್ನು ಮುಖಂಡರ ಜೊತೆ ನಡೆಸುತ್ತಿದ್ದಾರೆ. ಪಕ್ಷ ಸಂಘಟನೆ, ಬಲವರ್ಧನೆ ಹಾಗೂ 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮುಖಂಡರು ಮಹತ್ವದ ಚರ್ಚೆ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ನಿವಾಸದಲ್ಲಿ ಸಭೆ:
ನಿನ್ನೆ ಸಂಜೆಯವರೆಗೂ ಸಭೆ ನಡೆಸಿದ ಸಿದ್ದರಾಮಯ್ಯ ಇಂದು ಸಂಜೆ ಕೂಡ ಮಹತ್ವದ ಸಭೆ ನಡೆಸಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ರಾಜಶೇಖರ ಪಾಟೀಲ್, ಶಾಸಕರಾದ ಎಂ.ವೈ. ಪಾಟೀಲ್, ಚಂದ್ರಶೇಖರ ಪಾಟೀಲ್, ಮಾಜಿ ಶಾಸಕರಾದ ಬಿ.ಆರ್. ಪಾಟೀಲ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ನಿನ್ನೆ ಮಾಜಿ ಸಚಿವ ಕೃಷ್ಣ ಬೈರೇಗೌಡ, ಅಪ್ಪಾಜಿ ನಾಡಗೌಡ, ಶಿವಾನಂದ ಪಾಟೀಲ್, ಶಾಸಕರಾದ ಬಸವನಗೌಡ ದದ್ದಲ್, ಹೂಲಿಗೇರಿ, ವೆಂಕಟರಮಣಪ್ಪ, ಬೈರತಿ ಸುರೇಶ್, ಮೋಹನ್ ಕೊಂಡಜ್ಜಿ, ಮಾಜಿ ಶಾಸಕರಾದ ಅನಿಲ್ ಲಾಡ್, ಕರ್ನಾಟಕ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಚನ್ನಕೃಷ್ಣಪ್ಪ ಅವರ ನೇತೃತ್ವದಲ್ಲಿ ದಲಿತ ಸಂಘಟನೆಗಳ ಮುಖಂಡರು ಸಹ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಎಲ್ಲಾ ಜಾತಿ ಹಾಗೂ ಸಮುದಾಯಗಳನ್ನು ಒಗ್ಗೂಡಿಸಿ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಕಾಂಗ್ರೆಸ್ನ ಗುರಿಯಾಗಿದ್ದು, ಸದ್ಯ ಘೋಷಣೆಯಾಗದಿರುವ ಬಿಬಿಎಂಪಿ ಚುನಾವಣೆಯನ್ನು ಪ್ರಮುಖವಾಗಿಟ್ಟುಕೊಂಡು ನಾಳೆ ಸಭೆ ನಡೆಸುವ ಕಾಂಗ್ರೆಸ್ ನಾಯಕರು, ಮುಂಬರುವ ದಿನಗಳಲ್ಲಿ ವಿಧಾನಸಭೆ ಚುನಾವಣೆಯ ಸಿದ್ಧತೆ ಕುರಿತು ಸರಣಿ ಸಭೆಗಳನ್ನು ನಡೆಸಲು ತೀರ್ಮಾನಿಸಿದ್ದಾರೆ.