ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಸಿಬಿಐ ತನಿಖೆಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆಯನ್ನು ಪ್ರಶ್ನಿಸಿದ್ದ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ.
ಡಿಕೆ ಶಿಕವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ ರಾಜ್ಯ ಸರ್ಕಾರ, ಸಿಬಿಐಗೆ ನೋಟಿಸ್ ಜಾರಿ ಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಉದ್ದೇಶಪೂರ್ವಕವಾಗಿ ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಲಾಗಿದೆ. ಹೀಗಾಗಿ ಸರ್ಕಾರ ನೀಡಿರುವ ಅನುಮತಿಯನ್ನು ರದ್ದು ಪಡಿಸಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ಏಕಸದಸ್ಯ ಪೀಠದ ಆದೇಶ: ಡಿಕೆ ಶಿವಕುಮಾರ್ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಎಚ್ಎಎಲ್ ನೌಕರರಾಗಿದ್ದ ಶಶಿಕುಮಾರ್ ಎಂಬುವರು ಸಲ್ಲಿಸಿದ್ದ ಅರ್ಜಿಯ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ, ಅದೇ ಆದೇಶವನ್ನು ಪ್ರಶ್ನಿಸಿದ್ದ ಮೇಲ್ಮನವಿಯನ್ನೂ ದ್ವಿಸದಸ್ಯ ಪೀಠ ರದ್ದು ಪಡಿಸಿದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸುವುದಾಗಿ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಡಿಕೆಶಿ ದ್ವಿಸದಸ್ಯ ಪೀಠದ ಮೊರೆ ಹೋಗಿದ್ದಾರೆ.
ಡಿಕೆಶಿ ಪರ ವಾದ ಮಂಡಿಸಿದ ವಕೀಲರು: ಏಕಸದಸ್ಯ ಪೀಠದ ಮುಂದೆ ಶಿವಕುಮಾರ್ ಪರ ವಾದ ಮಂಡಿಸಿದ ವಕೀಲರು, ಪ್ರಕರಣವನ್ನು ದಾಖಲಿಸಿರುವ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ಈಗಾಗಲೇ ಆದಾಯ ತೆರಿಗೆಗೆ ಸಂಬಂಧಿಸಿದ ಮೂರು ಪ್ರಕರಣಗಳು ಶಿವಕುಮಾರ್ ಅವರ ಪರವಾಗಿವೆ. ಇದು ನಾಲ್ಕನೇ ಎಫ್‌ಐಆರ್. ಜನಪ್ರತಿನಿಧಿಗಳ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ದಾಖಲಿಸುವ ಮುನ್ನ ವಿಧಾನ ಸಭಾಧ್ಯಕ್ಷರ ಅನುಮತಿ ಪಡೆಯಬೇಕಿತ್ತು. ಅಂತೆಯೇ, ತನಿಖೆಗೆ ನೀಡಲಾಗಿರುವ ಆಡಳಿತಾತ್ಮಕ ನಿರ್ಧಾರಕ್ಕೆ ಸಕಾರಣವೂ ಇಲ್ಲ. ಹೀಗಾಗಿ, ತನಿಖೆಗೆ ಶಿಫಾರಸು ಮಾಡಲಾದ ಕ್ರಮ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.
ಸರ್ಕಾರದ ಪರ ವಾದ ಮಂಡಿಸಿ, ಸರ್ಕಾರ ನಿಯಮಗಳ ಪ್ರಕಾರದಲ್ಲಿಯೇ ತನಿಖೆಗೆ ಸಮ್ಮತಿ ನೀಡಿದೆ. ಇದರಲ್ಲಿ ಯಾವುದೇ ನಿಯಮಗಳು ಉಲ್ಲಂಘನೆ ಆಗಿಲ್ಲ. ಆದ್ದರಿಂದ ಅರ್ಜಿ ವಜಾಗೊಳಿಸಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್, ಇಂತಹುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಹೇಳುವುದಾಗಲೀ ಅಥವಾ ಇಂತಹುದೇ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸುವ ಹಕ್ಕನ್ನಾಗಲೀ ಆರೋಪಿಯು ಹೊಂದಿಲ್ಲ. ವಿಶೇಷ ಅಧಿನಿಯಮವಾದ, ದೆಹಲಿ ಪೊಲೀಸ್ ಸ್ಥಾಪನಾ ಕಾಯ್ದೆ 1947ರ ಕಲಂ 6ರಡಿಯಲ್ಲಿ ತನಿಖೆಗೆ ನೀಡಲಾದ ಒಪ್ಪಿಗೆಯ ಕಾರಣಗಳನ್ನು ಸಿಬಿಐ ವಿವರಿಸುವ ಅಗತ್ಯವೇ ಇಲ್ಲ ಎಂದರು.
ಎರಡೂವರೆ ವರ್ಷಗಳಲ್ಲಿ ಸಿಬಿಐ ಈಗಾಗಲೇ ಶೇಕಡಾ 90ರಷ್ಟು ತನಿಖೆ ಪೂರ್ಣಗೊಳಿಸಿದೆ. ಈ ಕುರಿತಂತೆ ತನಿಖೆಯ ವಸ್ತುಸ್ಥಿತಿ ವರದಿಯನ್ನು ಕೋರ್ಟಿಗೂ ಸಲ್ಲಿಸಲಾಗಿದೆ. ಇಷ್ಟೆಲ್ಲಾ ಸಮಯ ಕಳೆದ ಮೇಲೆ ಅರ್ಜಿದಾರರು ಅಧಿಸೂಚನೆ ಪ್ರಶ್ನಿಸುವುದಾಗಲೀ ಅಥವಾ ರದ್ದುಗೊಳಿಸಿ ಎಂದು ಕೋರುವುದಾಗಲಿ ಕಾನೂನು ಪ್ರಕಾರ ಸಾಧ್ಯವಿಲ್ಲ. ಇದು ಆದಾಯ ತೆರಿಗೆ ಕಾನೂನುಗಳ ಪ್ರಕಾರ ದಾಖಲಾಗಿಸಿರುವ ವಿಶೇಷ ಕ್ರಿಮಿನಲ್ ಪ್ರಕರಣ ವಾಗಿದೆ. ಹೀಗಾಗಿ ಅರ್ಜಿ ವಜಾಗೊಳಿಸಬೇಕು ಎಂದು ಮನವಿ ಮಾಡಿದರು.
ಪ್ರಕರಣದ ಹಿನ್ನೆಲೆ ಏನು?: ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಕಲಂ 13 (2), 13 (1) (ಇ) ಅಡಿಯಲ್ಲಿ 2020ರ ಅಕ್ಟೋಬರ್ 3ರಂದು ಸಿಬಿಐ ಪ್ರಕರಣ ದಾಖಲಿಸಿದೆ. ಸಿಬಿಐ ತನಿಖೆಗೆ ಒಪ್ಪಿಸಿದ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಡಿಕೆ ಶಿವಕುಮಾರ್ ಈ ಅರ್ಜಿ ಸಲ್ಲಿಸಿದ್ದಾರೆ.
ಇದನ್ನೂ ಓದು: ಮನುವಾದಿ ಮನಸ್ಸಿನವರಿಂದ ಕಾಂಗ್ರೆಸ್ ನ ಶಕ್ತಿ ಯೋಜನೆ ವ್ಯಂಗ್ಯ : ಸಚಿವ ಎಚ್ ಸಿ ಮಹಾದೇವಪ್ಪ