ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಾಳೆಯಿಂದ ಎರಡು ದಿನ ವಿವಿಧ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಬೆಳಗ್ಗೆ ಒಂಬತ್ತು ಗಂಟೆಗೆ ಬೆಂಗಳೂರಿನಿಂದ ತುಮಕೂರಿಗೆ ಪ್ರಯಾಣ ಬೆಳೆಸುವ ಶಿವಕುಮಾರ್ ಅವರು, ಎರಡು ದಿನ ತುಮಕೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮೊದಲು ತುಮಕೂರು ನಂತರ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಪಕ್ಷ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಇದೇ ಸಂದರ್ಭ ಅವರು ಪಾಲ್ಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ತುಮಕೂರಿನಲ್ಲಿ ಆಯೋಜಿಸಿರುವ ಜನಜಾಗೃತಿ ಅಭಿಯಾನ ಪಾದಯಾತ್ರೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಸಂಜೆ 2.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಅವರು, ಹೆಚ್ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ತೆರಳಲಿದ್ದಾರೆ. ಅಲ್ಲಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ಗೆ ಆಗಮಿಸುತ್ತಾರೆ.
ರಾತ್ರಿ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಪುತ್ರಿಯ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಲಬುರ್ಗಿಯಲ್ಲಿ ವಾಸ್ತವ್ಯ ಹೂಡಲಿರುವ ಅವರು, ಸೋಮವಾರ ಬೆಳಗ್ಗೆ 10.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರು ತಲುಪಲಿದ್ದಾರೆ.