ಬೆಂಗಳೂರು : ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣ ಸಂಬಂಧ ಕೇಂದ್ರೀಯ ತನಿಖಾ ದಳದ (ಸಿಬಿಐ) ತನಿಖೆಗೆ ಮಾಡುವುದಕ್ಕೆ ಅನುಮತಿ ನೀಡಿ ಆದೇಶಿಸಿದ್ದ ಸರ್ಕಾರದ ಕ್ರಮ ರದ್ದು ಮಾಡುವಂತೆ ಕೋರಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಬುಧವಾರ(ನವೆಂಬರ್ 22)ಕ್ಕೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ತಿಳಿಸಿದೆ.
ಸಿಬಿಐ ಪರ ವಕೀಲ ಪಿ ಪ್ರಸನ್ನಕುಮಾರ್ ಅವರು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಸುಪ್ರೀಂಕೋರ್ಟ್ ಆದೇಶವನ್ನು ಸಲ್ಲಿಸಿ, ಪ್ರಕರಣ ಪಟ್ಟಿ ಮಾಡುವಂತೆ ಕೋರಿದರು. ಈ ಅಂಶ ದಾಖಲಿಸಿಕೊಂಡು ನ್ಯಾಯಪೀಠ ಅರ್ಜಿಯನ್ನು ನವೆಂಬರ್ 22ಕ್ಕೆ ಪಟ್ಟಿ ಮಾಡುವಂತೆ ರಿಜಿಸ್ಟ್ರಾರ್‌ಗೆ ಸೂಚನೆ ನೀಡಿತು.
ಸುಪ್ರೀಂಕೋರ್ಟ್ ನವೆಂಬರ್ 11ರಂದು ಶಿವಕುಮಾರ್ ಅವರ ಪರವಾಗಿ ನೀಡಿರುವ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಈಗಾಗಲೇ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಸಿದೆ. ಹೀಗಾಗಿ, ಮಧ್ಯಂತರ ಆದೇಶ ತೆರವು ಮಾಡುವಂತೆ ಸಿಬಿಐ ಕೋರಿರುವ ಅರ್ಜಿ ಹಾಗೂ ಮೇಲ್ಮನವಿಯನ್ನು ತುರ್ತಾಗಿ ಅಂದರೆ ಎರಡು ವಾರದಲ್ಲಿ ಇತ್ಯರ್ಥಪಡಿಸುವಂತೆ ಹೈಕೋರ್ಟ್‌ಗೆ ಕೋರಲಾಗಿದೆ ಎಂದು ಆದೇಶದಲ್ಲಿ ವಿವರಿಸಿದೆ.
ಆದಾಯ ಮೀರಿದ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ವಿವಿಧ ಸೆಕ್ಷನ್ಗಳ ಅಡಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ ಕೆ ಶಿವಕುಮಾರ್ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಅನುಮತಿ ನೀಡಿತ್ತು. ಈ ಆದೇಶ ವಜಾ ಮಾಡಲು ನಿರಾಕರಿಸಿದ್ದ ಏಕಸದಸ್ಯ ಪೀಠದ ಆದೇಶಕ್ಕೆ ಮುಂದಿನ ವಿಚಾರಣೆಯವರೆಗೆ ದ್ವಿಸದಸ್ಯ ಪೀಠ ತಡೆ ನೀಡಿತ್ತು.
ಪ್ರಕರಣದ ಹಿನ್ನೆಲೆ: ಡಿ ಕೆ ಶಿವಕುಮಾರ್ ಅವರು ಗಣಿಗಾರಿಕೆ ಮತ್ತು ರಿಯಲ್ ಎಸ್ಟೇಟ್ ಉದ್ಯಮ ಸೇರಿದಂತೆ ಹಲವು ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದು, ಅವರಿಗೆ ದೆಹಲಿ ಸೇರಿದಂತೆ ವಿವಿಧ ಸ್ಥಳಗಳ ಮೇಲೆ 2017ರ ಆಗಸ್ಟ್ 2ರಂದು ಆದಾಯ ತೆರಿಗೆ ಇಲಾಖೆ ಶೋಧ ನಡೆಸಿತ್ತು. ಈ ವೇಳೆ 8.59 ಕೋಟಿ ರೂಪಾಯಿ ಹಣ ಪತ್ತೆಯಾಗಿತ್ತು. ಡಿ ಕೆ ಶಿವಕುಮಾರ್ ಅವರಿಗೆ ಸೇರಿದ ಸ್ಥಳದಲ್ಲಿ 41 ಲಕ್ಷ ರೂಪಾಯಿ ಪತ್ತೆಯಾಗಿತ್ತು. ಇದರ ಬೆನ್ನಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಇದರ ಬಳಿಕ ಜಾರಿ ನಿರ್ದೇಶನಾಲಯ ಪ್ರಕರಣ ಶಿವಕುಮಾರ್ ಅವರ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಇದನ್ನು ಆಧರಿಸಿ 2019ರ ಸೆಪ್ಟೆಂಬರ್ 3ರಂದು ಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು. ಆನಂತರ 2019ರ ಸೆಪ್ಟೆಂಬರ್ 9ರಂದು ಜಾರಿ ನಿರ್ದೇಶನಾಲಯದ ಪತ್ರ ಆಧರಿಸಿ, ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರವು ಅನುಮತಿ ನೀಡಿತ್ತು.
ಇದನ್ನೂ ಓದಿ: ಗ್ರಾಮದ ಪಟೇಲ್ ಆಗಿ ಸೇವೆ ಸಲ್ಲಿಸಿದವರಿಗೆ ಅನುಕಂಪದ ಭತ್ಯೆ ನಿರಾಕರಣೆ: ಅಧಿಕಾರಿಗಳ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ