ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಹಿನ್ನಡೆ ಬೆನ್ನಲ್ಲೇ ಕಾಂಗ್ರೆಸ್ ರಾಷ್ಟ್ರೀಯ ನಾಯಕತ್ವ ಬದಲಾವಣೆ ಕೂಗು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಪರವಾಗಿ ಬ್ಯಾಟ್ ಬೀಸಿದ್ದಾರೆ.
ಎಐಸಿಸಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಕೆಳಗಿಳಿದ ದಿನದಿಂದಲೂ ರಾಜ್ಯ ಕಾಂಗ್ರೆಸ್ ನಾಯಕರು ಅವರು ಮತ್ತೊಮ್ಮೆ ಅಧ್ಯಕ್ಷಗಾದಿ ಅಲಂಕರಿಸಬೇಕು ಎಂದು ಒತ್ತಾಯಿಸುತ್ತಲೇ ಬಂದಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ನಾಯಕತ್ವದ ಬದಲಾವಣೆ ಆಗಬೇಕು ಎಂಬ ಕೂಗು ಕೇಳಿಬಂದ ಸಂದರ್ಭದಲ್ಲೆಲ್ಲ ರಾಜ್ಯ ಕಾಂಗ್ರೆಸ್ ನಾಯಕರು ಗಾಂಧಿ ಕುಟುಂಬದ ಪರವಾಗಿ ಧ್ವನಿ ಎತ್ತುವ ಕಾರ್ಯ ಮಾಡಿದ್ದಾರೆ. ಈಗಲೂ ಸಹ ರಾಷ್ಟ್ರೀಯ ನಾಯಕತ್ವ ಬದಲಾವಣೆ ಕೇಳಿ ಬರುತ್ತಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ರಾಹುಲ್ ಗಾಂಧಿ ಪರವಾಗಿ ಮಾತನಾಡಿದ್ದಾರೆ.
ಪ್ರಸ್ತುತ ದೆಹಲಿಯಲ್ಲೇ ಇರುವ ಡಿಕೆಶಿ, ಟ್ವೀಟ್ ಮೂಲಕ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಮಾತನಾಡಿದ್ದು, ನಾನು ಮೊದಲೇ ಹೇಳಿದಂತೆ ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರೇ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳಬೇಕು. ಇದು ನನ್ನಂತಹ ಲಕ್ಷಾಂತರ ಕಾಂಗ್ರೆಸ್ ಕಾರ್ಯಕರ್ತರ ಆಶಯವಾಗಿದೆ ಎಂದು ಹೇಳಿದ್ದಾರೆ.
ಡಿ.ಕೆ ಶಿವಕುಮಾರ್ ಮಾತ್ರವಲ್ಲದೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ರಾಹುಲ್ ಗಾಂಧಿ ಪರವಾಗಿಯೇ ಸಾಕಷ್ಟು ಸಾರಿ ಹೇಳಿಕೆಯನ್ನು ನೀಡಿದ್ದಾರೆ. ಇದೀಗ ಜಿ 23 ನಾಯಕರು ಕಾಂಗ್ರೆಸ್ ನಾಯಕತ್ವ ಬದಲಾವಣೆ ಸಂಬಂಧ ಧ್ವನಿ ಎತ್ತುತ್ತಿದ್ದಾರೆ. ಸೋನಿಯಾ ಗಾಂಧಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ತಮ್ಮ ಕುಟುಂಬ ಸದಸ್ಯರ ಬದಲು ಬೇರೆ ನಿಷ್ಠಾವಂತ ಕಾಂಗ್ರೆಸ್ ನಾಯಕರಿಗೆ ಅಧಿಕಾರ ವಹಿಸಬೇಕು ಎಂಬ ಒತ್ತಡ ಹೇರುತ್ತಿದ್ದಾರೆ.
ಇದರ ಬೆನ್ನಲ್ಲೇ ಗಾಂಧಿ ಕುಟುಂಬದ ಪರವಾಗಿ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿರುವ ರಾಜ್ಯ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಯಾವುದೇ ಕಾರಣಕ್ಕೂ ಗಾಂಧಿ ಕುಟುಂಬದಿಂದ ಅಧಿಕಾರವನ್ನು ಕಿತ್ತುಕೊಳ್ಳುವ ಕಾರ್ಯ ಆಗಬಾರದು ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ರಾಜೀನಾಮೆಗೆ ಮೂವರು ಸಿದ್ಧ ಎಂದಿದ್ದ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ: ಆದರೆ...