ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನ.22 ರಿಂದ 25ರವರೆಗೆ ಬಳ್ಳಾರಿ, ರಾಯಚೂರು, ಕಲಬುರಗಿ ಹಾಗೂ ಬೀದರ್ ಜಿಲ್ಲಾ ಪ್ರವಾಸ ಕೈಗೊಂಡು ಪಕ್ಷ ಬಲವರ್ಧನೆಗೆ ಮುಂದಾಗಿದ್ದಾರೆ.
ನ.22 ರಂದು ಬೆಳಗ್ಗೆ 7 ಗಂಟೆಗೆ ಬಳ್ಳಾರಿ ಜಿಲ್ಲೆಯ ಹೊಸಪೇಟೆಗೆ ಪ್ರಯಾಣ ಬೆಳೆಸುವ ಶಿವಕುಮಾರ್, ಹೊಸಪೇಟೆ, ಬಳ್ಳಾರಿ ನಗರ ಮತ್ತು ಬಳ್ಳಾರಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಸಭೆ ನಡೆಸಲಿದ್ದಾರೆ. ನ.23 ರಂದು ರಾಯಚೂರು ಜಿಲ್ಲೆ ಮಸ್ಕಿಗೆ ತೆರಳಿ ಕ್ಷೇತ್ರದಲ್ಲಿ ಕಾರ್ಯಕರ್ತರ ಸಭೆ ನಡೆಸಿ ಉಪ ಚುನಾಣೆಯ ಬಗ್ಗೆ ರಣತಂತ್ರ ರೂಪಿಸಲಿದ್ದಾರೆ.
ನ.24 ರಂದು ಬೆಳಗ್ಗೆ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಬಸವಕಲ್ಯಾಣದತ್ತ ಪ್ರಯಾಣ ಬೆಳೆಸಲಿದ್ದಾರೆ. ಬಸವಕಲ್ಯಾಣ ಶಾಸಕ ಬಿ. ನಾರಾಯಣರಾವ್ ನಿಧನದಿಂದ ತೆರವಾಗಿರುವ ಕ್ಷೇತ್ರದಲ್ಲಿ ಯಾವುದೇ ಸಂದರ್ಭದಲ್ಲಿ ಉಪ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಕ್ಷೇತ್ರವನ್ನು ಮರಳಿ ಗೆಲ್ಲಿಸಿಕೊಳ್ಳುವ ಪ್ರಯತ್ನಕ್ಕೆ ಡಿಕೆಶಿ ಮುಂದಾಗಿದ್ದಾರೆ.
3:30ಕ್ಕೆ ಬೀದರ್ ಜಿಲ್ಲೆಗೆ ಆಗಮಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯ ಕಾರ್ಯಕರ್ತರು ಹಾಗೂ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ಈ ಕಾರ್ಯಕ್ರಮದ ಬಳಿಕ ಹೈದರಾಬಾದ್ನಲ್ಲಿ ವಾಸ್ತವ್ಯ ಹೂಡಿ ನ.25 ರಂದು ಬೆಳಗ್ಗೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.