ಬೆಂಗಳೂರು: ಎರಡು ದಿನದ ಪ್ರವಾಸದ ಪ್ರಯುಕ್ತ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ತೆರಳಿದ್ದಾರೆ. ಇಂದು ಸಂಜೆ ಹಾಗೂ ನಾಳೆ ತಮ್ಮ ಪಕ್ಷದ ನಾಯಕರನ್ನು ಭೇಟಿ ಮಾಡಲಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕೃತವಾಗಿ ಪದಗ್ರಹಣ ಮಾಡಿದ ನಂತರ ಇದೇ ಮೊದಲ ಬಾರಿಗೆ ದೆಹಲಿಗೆ ತೆರಳಿರುವ ಡಿಕೆಶಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾಗಾಂಧಿ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಬರಲಿದ್ದಾರೆ.
ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಅಭಿನಂದನೆ ಸಲ್ಲಿಸುವ ಉದ್ದೇಶದಿಂದ ದೆಹಲಿಗೆ ತೆರಳಿರುವ ಡಿ ಕೆ ಶಿವಕುಮಾರ್, ಈ ಭೇಟಿ ಸಂದರ್ಭ ರಾಷ್ಟ್ರೀಯ ನಾಯಕರನ್ನು ಅಭಿನಂದಿಸುವುದರ ಜೊತೆಗೆ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳು, ಕೊರೊನಾ ನಿಯಂತ್ರಣದ ವಿಚಾರದಲ್ಲಿ ರಾಜ್ಯ ಸರ್ಕಾರದ ವೈಫಲ್ಯ, ತಾವು ಅಧ್ಯಕ್ಷರಾದ ಬಳಿಕ ಕೈಗೊಂಡ ಹಲವು ನಿರ್ಧಾರಗಳು ಹಾಗೂ ಮುಂದಿನ ದಿನಗಳಲ್ಲಿ ಹಮ್ಮಿಕೊಂಡಿರುವ ಕಾರ್ಯಯೋಜನೆಗಳು ಮತ್ತು ವಿವಿಧ ಸಮಿತಿಗಳಿಗೆ ಪದಾಧಿಕಾರಿಗಳ ನೇಮಕ ಸಂಬಂಧ ರಾಷ್ಟ್ರೀಯ ನಾಯಕರ ಜತೆ ಚರ್ಚಿಸಲಿದ್ದಾರೆ.
ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ವಿಚಾರದಲ್ಲಿ ಕೈಗೊಳ್ಳುವ ಹಲವು ನಿರ್ಧಾರಗಳಿಗೆ ಸಮ್ಮತಿ ಪಡೆದು ಡಿಕೆಶಿ ರಾಜ್ಯಕ್ಕೆ ವಾಪಸಾಗಲಿದ್ದಾರೆ.