ಬೆಂಗಳೂರು: ಹೊಸಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ತಮ್ಮ ಹೇಳಿಕೆಗಳ ಮೂಲಕ ಸುದ್ದಿಯಲ್ಲಿರುತ್ತಿದ್ದು, ಈಗ ಅವರು ನೀಡಿರುವ ಹೇಳಿಕೆಯೊಂದು ಚರ್ಚೆಗೆ ಗ್ರಾಸವಾಗಿದೆ.
ಕೆಲ ದಿನಗಳ ಹಿಂದೆ ಎಂಟಿಬಿ ನಾಗರಾಜ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಲೂರು ಶಾಸಕ ನಂಜೆಗೌಡ, ಕೃಷ್ಣಬೈರೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರಿಗೆ ನಾನು ಸಾಲ ನೀಡಿದ್ದೇನೆ ಎಂದು ಹೇಳಿಕೆಗಳನ್ನು ನೀಡಿದ್ದು, ಆ ಮಾತುಗಳೇ ಈಗ ಮುಳುವಾಗಿವೆ. ಎಂಟಿಬಿ ಮಾತುಗಳನ್ನೆ ಅಸ್ತ್ರವನ್ನಾಗಿಸಿಕೊಂಡಿರುವ ಕಾಂಗ್ರೆಸ್ ನಾಯಕರು, ಸಾಲ ನೀಡಿರುವ ಮಾಹಿತಿಯನ್ನು ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ನೀಡಿದ್ದಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ.
ಇದನ್ನು ಮನಗಂಡಿರುವ ಬಿಜೆಪಿ ನಾಯಕರು, ಮಾಧ್ಯಮಗಳಿಗೆ ಯಾವುದೇ ವಿವಾದಾತ್ಮಕ ಹೇಳಿಕೆ ನೀಡಬಾರದು ಎಂಬ ಸೂಚನೆ ನೀಡಿದ್ದಾರೆ. ಹೀಗಾಗಿ ಎಂಟಿಬಿ ನಾಗರಾಜ್ ಮೌನಕ್ಕೆ ಶರಣಾಗಿದ್ದು, ಯಾವುದೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ.