ಬೆಂಗಳೂರು: ಕೊರೊನಾ ಸೋಂಕಿನ ಭಯದಿಂದ ಸುಳ್ಳು ನೆಪವೊಡ್ಡಿ ಕರ್ತವ್ಯಕ್ಕೆ ಹಾಜರಾಗದ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಸರ್ಕಾರಿ ಹಾಗೂ ಖಾಸಗಿ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಎಚ್ಚರಿಕೆ ನೀಡಿದ್ದಾರೆ. ನೆಪ ಹೇಳಿ ಕೆಲಸಕ್ಕೆ ಗೈರಾದರೆ ವೈದ್ಯರ ರಿಜಿಸ್ಟ್ರೇಷನ್ ಮತ್ತು ಲೈಸೆನ್ಸ್ ರದ್ದು ಮಾಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.
ವಿಧಾನಸೌಧದಲ್ಲಿ ಇಂದು ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಮೆಡಿಕಲ್ ಹಾಗೂ ನರ್ಸಿಂಗ್ ಕೌನ್ಸಿಲ್ನಲ್ಲೂ ಪ್ರಕಟಣೆ ಮಾಡಲಾಗಿದೆ. ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ಇದೆ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ವೈದ್ಯರು ವೈದ್ಯಕೀಯ ಸಿಬ್ಬಂದಿ ಕೊರತೆ ಆಗಬಾರದು ಎಂದು ಹೇಳಿದರು.
ಯಾವುದೇ ಕಾರಣಕ್ಕೂ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ಯಾರೂ ತಪ್ಪಿಸಿಕೊಳ್ಳಬಾರದು. ಯಾರಾದರೂ ಕರ್ತವ್ಯದಿಂದ ತಪ್ಪಿಸಿಕೊಂಡರೆ ಅವರ ಲೈಸನ್ಸ್ ರದ್ದಾಗುತ್ತದೆ. ಕೆಲಸಕ್ಕೆ ವರದಿ ಮಾಡಿಕೊಳ್ಳದವರ ರಿಜಿಸ್ಟ್ರೇಷನ್ ಮತ್ತು ಲೈಸೆನ್ಸ್ ವಾಪಸ್ ಪಡೆದುಕೊಳ್ಳಲಾಗುವುದು ಎಂದು ಡಿಸಿಎಂ ಎಚ್ಚರಿಕೆ ನೀಡಿದರು.