ಬೆಂಗಳೂರು: ನೆರೆಪೀಡಿತ ಪ್ರದೇಶಗಳಲ್ಲಿನ ಕಾಳಜಿ ಕೇಂದ್ರಗಳಲ್ಲಿ ಕೋವಿಡ್ ಸುರಕ್ಷತೆ ಹಾಗೂ ಸಾಂಕ್ರಾಮಿಕ ರೋಗಗಳ ತಡೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಆರು ಜಿಲ್ಲೆಗಳ ಡಿಸಿ, ಸಿಇಒ, ಡಿಹೆಚ್‌ಒಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಸಂವಾದದ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ಶುದ್ಧವಾದ ಕುಡಿಯುವ ನೀರು ಪೂರೈಕೆಗೆ ಸೂಚಿಸಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ಇಲ್ಲದ ಕಡೆಯಲ್ಲಿ ಬಿಸಿ ನೀರು ಕೊಡಲು ಸೂಚಿಸಲಾಗಿದೆ. ಬ್ಲೀಚಿಂಗ್ ಪೌಡರ್ ಸಿಂಪಡಣೆ, ಸ್ಯಾನಿಟೈಸ್ ಮಾಡಲು ನಿರ್ದೇಶನ ನೀಡಲಾಗಿದೆ. ಬಾಣಂತಿ, ಗರ್ಭಿಣಿ, ವೃದ್ಧರು, ಮಕ್ಕಳ ಮೇಲೆ, ಅವರ ಆರೋಗ್ಯ ಸುರಕ್ಷತೆಯ ಮೇಲೆ ನಿಗಾ ಇಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಮೊಬೈಲ್ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳನ್ನ ಆರೈಕೆ ಕೇಂದ್ರಗಳ ಬಳಿಗೆ ತೆಗೆದುಕೊಂಡು ಹೋಗಲು ಸೂಚಿಸಲಾಗಿದೆ. ಮಾನವ ಸಂಪನ್ಮೂಲ ವ್ಯಕ್ತಿಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಆರೋಗ್ಯ ಇಲಾಖೆಯಿಂದ ಉಚಿತ ಮಾಸ್ಕ್‌ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಕೆಲವು ಜಿಲ್ಲೆಗಳಲ್ಲಿ ಹಲವು ಗ್ರಾಮಗಳು ಮುಳುಗಡೆ ಆಗಿವೆ. ಅಲ್ಲಿ ಸಿಲುಕಿದ್ದ ಜನರನ್ನ ಪರಿಹಾರ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ155 ಗ್ರಾಮಗಳು ಜಲಾವೃತವಾಗಿವೆ. ವಿಜಯಪುರ ಜಿಲ್ಲೆಯಲ್ಲಿ 27 ಗ್ರಾಮ ಜಲಾವೃತವಾಗಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಬೆಳಗಾವಿ ಜಿಲ್ಲೆಯ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಪರಿಹಾರ ಕೇಂದ್ರಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಸಾಮಾಜಿಕ ಅಂತರ, ಮಾಸ್ಕ್‌ಗಳ ಕಡ್ಡಾಯ, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಡೆಂಗ್ಯೂ, ಚಿಕುನ್ ಗುನ್ಯಾ ಕಡಿಮೆ ಆಗಿದೆ ಎಂದು ತಿಳಿಸಿದರು.