ಬೆಂಗಳೂರು: ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನೋಡಿದರೆ ಅಚ್ಚರಿ ಆಗುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಸಭೆ ನಡೆಸಿ ಎಂದು ಸಿದ್ದರಾಮಯ್ಯನವರು ಹೇಳುತ್ತಿದ್ದಾರೆ. ಶಾಂತಿ ಸಭೆ ಯಾವುದಕ್ಕಾಗಿ ಮಾಡಬೇಕು? ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಿ ಸರ್ಕಾರಕ್ಕೆ ಕಪ್ಪು ಮಸಿ ಬಳಿಯಲು ಈ ದುಷ್ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ಕಿಡಿ ಕಾರಿದರು.
ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಘಟನೆ ದುರದೃಷ್ಟಕರ. ಪೊಲೀಸ್ ಠಾಣೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಜೊತೆಗೆ ಶಾಸಕರ ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ. ಕೋವಿಡ್ ಸಂದರ್ಭದಲ್ಲಿ ದೇಶದ್ರೋಹಿ ಕೆಲಸಕ್ಕೆ ಕೈ ಹಾಕಿದ್ದಾರೆ. ಈ ದುಷ್ಕೃತ್ಯದಲ್ಲಿ ಪಾಲ್ಗೊಂಡವರ ಕುಟುಂಬಕ್ಕೆ ಸರ್ಕಾರದ ಸವಲತ್ತು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ವಿಜಯೇಂದ್ರ ಆಗ್ರಹಿಸಿದರು.