ಬೆಂಗಳೂರು: ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದ್ದ ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್ಗೆ ಸಿಬಿಐ ಕ್ಲೀನ್ ಚಿಟ್ ನೀಡಿರುವ ಸಂಗತಿ ಬಯಲಾಗಿದೆ.
ಡಿವೈಎಸ್ಪಿ ಎಂ.ಕೆ. ಗಣಪತಿಯವರಿಗೆ ಮಾಜಿ ಸಚಿವ ಜಾರ್ಜ್ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಾಲಯಕ್ಕೆ ಸಿಬಿಐ ವರದಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.
2017 ರಲ್ಲಿ ಮಡಿಕೇರಿಯ ಲಾಡ್ಜ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಡಿವೈಸ್ಪಿ ಗಣಪತಿ, ಆತ್ಮಹತ್ಯೆಗೆ ಮುನ್ನ ಮಾಜಿ ಸಚಿವ ಕೆ.ಜೆ. ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ನನಗೆ ಕಿರುಕುಳ ಕೊಟ್ಟಿದ್ದಾರೆ ಎಂದು ಹೇಳಿದ್ದರು. ಹೀಗಾಗಿ ಪ್ರಕರಣದ ಬಗ್ಗೆ ಸ್ಥಳೀಯ ಠಾಣೆಯಲ್ಲಿ ತನಿಖೆ ನಡೆದು ನಂತರ ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು. ಬಳಿಕ ಗಣಪತಿ ಕುಟುಂಬದವರು ಪ್ರಕರಣವನ್ನು ಸಿಬಿಐ ತನಖೆಗೆ ವಹಿಸಲು ಆಗ್ರಹಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ನಂತರ ಸುಪ್ರೀಕೋರ್ಟ್ ನಿರ್ದೇಶನದಂತೆ ಸಿಬಿಐ ಪ್ರಕರಣದ ತನಿಖೆ ನಡೆಸಿತ್ತು. ಇದೀಗ ಸಿಬಿಐ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಮೃತ ಡಿವೈಎಸ್ಪಿ ಗಣಪತಿಯವರಿಗೆ ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿ ಪ್ರಣಬ್ ಮೊಹಂತಿ ಕಿರುಕುಳ ನೀಡಿದ್ದಾರೆ ಎಂಬ ಆರೋಪಕ್ಕೆ ಪುರಾವೆಗಳಿಲ್ಲ ಎಂದು ಹೇಳಿದೆ.