ಬೆಂಗಳೂರು: ತಾಲೂಕು ಮಟ್ಟದ ಪರಿಶೀಲನಾ ಸಭೆ ವೇಳೆ ಬಹಳಷ್ಟು ತಾಲೂಕುಗಳಲ್ಲಿ ಪಾಸಿಟಿವಿಟಿ ದರವು ತುಂಬಾ ಕಡಿಮೆ ಇರುವುದು ತಿಳಿದು ಬಂದಿದೆ. 12 ತಾಲೂಕುಗಳಲ್ಲಿ ಪಾಸಿಟಿವಿಟಿ ರೇಟ್ ಶೂನ್ಯವಿದೆ. ರಾಜ್ಯದಲ್ಲಿ ಶಾಲೆಗಳಿಗೆ ರಜೆ ನೀಡುವ ನಿರ್ಧಾರದ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವರು, ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು ನಗರ, ಬೆಳಗಾವಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಆಯಾ ಪ್ರದೇಶದ ವಾಸ್ತವಾಂಶ ತಿಳಿದುಕೊಂಡು ಶಾಲೆಗಳನ್ನು ನಡೆಸಲು ಸಾಧ್ಯವಿರುವಲ್ಲಿ ಎಂದಿನಂತೆ ತರಗತಿಗಳು ಮುಂದುವರೆಯಲಿವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸೋಂಕು ಏರುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಮುಖ್ಯಮಂತ್ರಿಗಳು ಪ್ರಮುಖ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಸಿಟಿವಿಟಿ ದರ ತಿಳಿದುಕೊಂಡು ಮುಂದಿನ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.
ಕೊರೊನಾದಿಂದ ಕಳೆದ ಒಂದೂವರೆ ವರ್ಷದಲ್ಲಿ ಮಕ್ಕಳ ಶಿಕ್ಷಣದ ಮೇಲೆ ಸಾಕಷ್ಟು ಪರಿಣಾಮವಾಗಿದೆ. ಹೀಗಾಗಿ ಈ ಬಾರಿ ಶಾಲೆಗಳನ್ನು ಬಂದ್ ಮಾಡದೇ, ಜಾಗರೂಕತೆಯಿಂದ ನಡೆಸಬೇಕೆಂದು ಸಿಎಂ ಸಲಹೆ ನೀಡಿದ್ದಾರೆ ಎಂದರು.
ಬೆಂಗಳೂರು ನಗರದಲ್ಲಿ ಸೋಂಕಿನ ಪ್ರಮಾಣವು ನಿತ್ಯ 10 ಸಾವಿರದ ಗಡಿ ದಾಟುತ್ತಿದೆ. 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಸೊಂಕು ತಗುಲಿಲ್ಲ, ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಈ ತರಗತಿಗಳನ್ನು ನಡೆಸಲಾಗುತ್ತಿದೆ.
ಉಳಿದ ತರಗತಿಗಳಿಗೆ ಬೆಂಗಳೂರಿನಲ್ಲಿ ರಜೆ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ನಿರ್ಧಾರ ತಿಳಿಸಲಿದೆ. ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಇದುವರೆಗೂ 1,000 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ಕಾಣಿಸಿಕೊಂಡಿದೆ ಎಂದು ನಾಗೇಶ್ ಮಾಹಿತಿ ನೀಡಿದರು.
ಇದನ್ನೂ ಓದಿ: ಪಾದಯಾತ್ರೆ ಕೈಬಿಡಿ, ಜನತೆ ಬಳಿ ಕ್ಷಮೆ ಕೇಳಿ: ಕೈ ನಾಯಕರಿಗೆ ಆರಗ ಜ್ಞಾನೇಂದ್ರ ಆಗ್ರಹ