ಬೆಂಗಳೂರು : ರಾಜ್ಯದಲ್ಲಿ ಅವಧಿ ಮುಗಿದಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಅವಧಿ ಮುಗಿದಿರುವ ಗ್ರಾ.ಪಂ.ಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಚುನಾವಣಾ ಆಯೋಗದ ಪರ ವಕೀಲರು ಪೀಠಕ್ಕೆ ಲಿಖಿತ ಮಾಹಿತಿ ನೀಡಿ, ಅವಧಿ ಮುಗಿದಿರುವ ಗ್ರಾ.ಪಂ.ಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮೀಸಲು ಪಟ್ಟಿ, ಮತದಾರರ ಪಟ್ಟಿ ಇದೇ ಆಗಸ್ಟ್ 31ರೊಳಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಕೊರೊನಾ ನಡುವೆಯೇ ಚುನಾವಣೆ ನಡೆಸಲು ಅಗತ್ಯವಿರುವ ಮಾರ್ಗಸೂಚಿಗಳನ್ನು (ಎಸ್ಓಪಿ) ಆರೋಗ್ಯ ಇಲಾಖೆಗೆ ಮನವಿ ಮಾಡಲಾಗಿದೆ. ಅದರಂತೆ ಎಸ್ಓಪಿ ರೂಪಿಸುವ ಕಾರ್ಯ ಪ್ರಗತಿಯಲ್ಲಿದೆ.
ಚುನಾವಣಾ ಖರ್ಚುವೆಚ್ಚಗಳಿಗೆ ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಚುನಾವಣೆ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಂದ ಸಲಹೆಗಳನ್ನು ತೆಗೆದುಕೊಳ್ಳಲಾಗಿದೆ. ಅದರಂತೆ ಶೀಘ್ರದಲ್ಲೇ ರಾಜ್ಯದ 226 ತಾಲೂಕುಗಳಲ್ಲಿರುವ 5,800 ಗ್ರಾಮ ಪಂಚಾಯತಿಗಳಿಗೆ 2 ಅಥವಾ 3 ಹಂತಗಳಲ್ಲಿ ಚುನಾವಣೆ ನಡೆಸಲಿದ್ದೇವೆ ಎಂದು ವಿವರಿಸಿದರು. ಈ ಸಂಬಂಧ ಚುನಾವಣಾ ಆಯೋಗ ಸಿದ್ಧಪಡಿಸಿದ ಲಿಖಿತ ಹೇಳಿಕೆಯನ್ನು ಪೀಠಕ್ಕೆ ಸಲ್ಲಿಸಿದರು. ಈ ಕುರಿತು ಹೇಳಿಕೆ ದಾಖಲಿಸಿಕೊಂಡ ಪೀಠ ವಿಚಾರಣೆಯನ್ನು ಸೆಪ್ಟೆಂಬರ್ 15ಕ್ಕೆ ಮುಂದೂಡಿತು.