ಬೆಂಗಳೂರು : ರಾಜರಾಜೇಶ್ವರಿನಗರ ಮತ್ತು ಶಿರಾ ಕ್ಷೇತ್ರಗಳ ಉಪಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡದಿರುವುದು ಗಮನಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಚಾರಕ್ಕೆ ಅನುಮತಿ ನೀಡಿರುವುದನ್ನು ವಾಪಸ್ ತೆಗೆದುಕೊಳ್ಳಬೇಕಾಗುತ್ತದೆ ಎಂದು ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.
ಚುನಾವಣಾ ಪ್ರಚಾರದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ. ದಂಡದ ಜತೆಗೆ ಪ್ರಚಾರಕ್ಕಾಗಿ ನೀಡಿರುವ ಅನುಮತಿಯನ್ನು ಹಿಂಪಡೆಯಲಾಗುವುದು ಎಂದು ಆಯೋಗ ತಿಳಿಸಿದೆ.
ಈ ಸಂಬಂಧ ಆಯೋಗವು ಎಲ್ಲಾ ರಾಜಕೀಯ ಪಕ್ಷಗಳಿಗೆ, ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳಿಗೆ, ಜಿಲ್ಲಾ ಚುನಾವಣಾಧಿಕಾರಿಗಳಿಗೆ, ರಿಟರ್ನಿಂಗ್ ಅಧಿಕಾರಿಗೆ ಪತ್ರ ಬರೆದು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸೂಚನೆ ನೀಡಿದೆ.
ಕಣದಲ್ಲಿರುವ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳು ಕೋವಿಡ್ ಮಾರ್ಗಸೂಚಿ ಅನುಸರಿಸದಿರುವುದು ಚುನಾವಣಾ ಆಯೋಗದ ಗಮನಕ್ಕೆ ಬಂದಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ ಬಳಕೆ ಮಾಡಬೇಕು ಎಂಬುದು ತಿಳಿದಿದ್ದರೂ ಕಡೆಗಣಿಸಲಾಗುತ್ತಿದೆ.
ಮಾರ್ಗಸೂಚಿಯನ್ನು ಗಾಳಿಗೆ ತೂರಿ ಮನಸೋಇಚ್ಛೆ ವರ್ತಿಸಲಾಗುತ್ತಿದೆ. ಇದನ್ನು ಆಯೋಗವು ಗಂಭೀರವಾಗಿ ಪರಿಗಣಿಸಲಾಗಿದೆ. ಮಾರ್ಗಸೂಚಿಯನ್ನು ಪಾಲನೆ ಮಾಡದಿದ್ದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.