ಬೆಂಗಳೂರು: ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಅಂತಿಮ ಮತದಾರರ ಪಟ್ಟಿಯನ್ನು ಜುಲೈ 9ರೊಳಗೆ ಪ್ರಕಟಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವ ಸಂಬಂಧ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲು ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್ ಫಣೀಂದ್ರ ಮಾಹಿತಿ ನೀಡಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ವಾರ್ಡ್ ಮೀಸಲು ಪಟ್ಟಿಯನ್ನು ಸರ್ಕಾರ ಅಂತಿಮಗೊಳಿಸಿದೆ. ಜುಲೈ 9ರೊಳಗೆ ಈ ಮೂರು ಮಹಾನಗರ ಪಾಲಿಕೆಗಳ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು. ಬಳಿಕ ಪರಿಸ್ಥಿತಿ ಅವಲೋಕಿಸಿ ಚುನಾವಣೆಗೆ ದಿನಾಂಕ ನಿಗದಿಪಡಿಸಲಾಗುವುದು ಎಂದರು.
ಇನ್ನು, ವಿಜಯಪುರ ಮಹಾನಗರ ಪಾಲಿಕೆಗೆ ಸಂಬಂಧಿಸಿದ ವ್ಯಾಜ್ಯ ಸುಪ್ರೀಂಕೋರ್ಟ್‌ನಲ್ಲಿದೆ. ಹೊಸಪೇಟೆ, ಗದಗ-ಬೆಟಗೇರಿ, ಅಣ್ಣಿಗೇರಿ ಮತ್ತಿತರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದ ಪ್ರಕರಣಗಳು ಹೈಕೋರ್ಟ್ನ ಧಾರವಾಡ ಪೀಠದಲ್ಲಿ ವಿಚಾರಣೆ ಹಂತದಲ್ಲಿದ್ದು, ಇದಕ್ಕಾಗಿ ವಿಶೇಷ ಪೀಠ ರಚಿಸಲಾಗಿದೆ. ಮುಂದಿನ ಶುಕ್ರವಾರ ಅರ್ಜಿಗಳ ವಿಚಾರಣೆ ನಡೆಯಲಿದೆ. ಶಿರಾ ಮತ್ತು ಚಿಕ್ಕಮಗಳೂರು ನಗರ ಸ್ಥಳೀಯ ಸಂಸ್ಥೆಗಳ ಮೀಸಲು ಅಧಿಸೂಚನೆಯನ್ನು ಸರ್ಕಾರ ಹೊರಡಿಸಬೇಕಿದೆ ಎಂದು ಆಯೋಗದ ಪರ ವಕೀಲರು ಮಾಹಿತಿ ನೀಡಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಯಾವೆಲ್ಲ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ಪುನರ್ ವಿಂಗಡಣೆ ಮತ್ತು ವಾರ್ಡ್ ಮೀಸಲು ನಿಗದಿಪಡಿಸಬೇಕಿದೆಯೋ ಅಲ್ಲಿ ಮುಂದಿನ ಎರಡು ತಿಂಗಳಲ್ಲಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿತು.
ಓದಿ: ಅರುಣ್ ಸಿಂಗ್ ಭೇಟಿಯಾದ ಸಿಎಂ ಪುತ್ರ ವಿಜಯೇಂದ್ರ: ಕುತೂಹಲ ಮೂಡಿಸಿದ ಚರ್ಚೆ!