ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 2019-20ನೇ ಸಾಲಿನಲ್ಲಿ ಡಿಪ್ಲೋಮಾ, ಇಂಜಿನಿಯರಿಂಗ್,ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸಲು ತೀರ್ಮಾನಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಯಲಿದೆ. ಹಾಗೆಯೇ ಮಧ್ಯಂತರ ಸೆಮಿಸ್ಟರ್ ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ತಿಳಿಸಿದ್ದಾರೆ.
ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಪೆಟ್ಟು ನೀಡಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಅವರ ಭವಿಷ್ಯದ ಬಗ್ಗೆಯೂ ನಿರ್ಧರಿಸುವ ಸವಾಲು ಸರ್ಕಾರದ ಮುಂದಿತ್ತು. ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜೊತೆ ಈ ಬಗ್ಗೆ ಸಮಾಲೋಚನೆ ನಡೆಸಿದ ನಂತರ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿಸಿದರು.
ಈ ಮಹತ್ತರ ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸ್ಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತ. ಸರ್ಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಹಸಿರು ನಿಶಾನೆ ತೋರಿಸಿದ್ದಾರೆ ಎಂದರು.
ಕೋವಿಡ್ನಿಂದ ಸಕಾಲದಲ್ಲಿ ತರಗತಿಗಳನ್ನು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ಡೌನ್ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್/ವರ್ಷದ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಗಿದೆ. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್/ಆಫ್‌ಲೈನ್) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ತೇರ್ಗಡೆ ಮಾಡುವುದು ಹೇಗೆ?:
ಮಧ್ಯಂತರ ಸೆಮಿಸ್ಟರ್/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.
ಇದರ ನಡುವೆಯೂ ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುವುದು. ಬ್ಯಾಕ್‌ಲಾಗ್ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ. ಏನೇ ಅನುಮಾನಗಳು ಇದ್ದರೂ ಈ ಹೆಲ್ಪ್ ಲೈನ್ಗೆ ಕರೆ ಮಾಡಬಹುದು (ದೂರವಾಣಿ ಸಂಖ್ಯೆ- 080 22341394 ) ಎಂದು ಹೇಳಿದರು.
ಅಂತಿಮ ಸೆಮಿಸ್ಟರ್ ಪರೀಕ್ಷೆ ಏಕೆ?:
ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಸೆಪ್ಟೆಂಬರ್ 1 ರಿಂದ ಆನ್‌ಲೈನ್ ತರಗತಿ :
2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್‌ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‌ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಜುಲೈ 30,31ಕ್ಕೆ ಸಿಇಟಿ ಪರೀಕ್ಷೆ:
ಇನ್ನು ಸಿಇಟಿ ದಿನಾಂಕದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಜುಲೈ 30, 31ಕ್ಕೆ ಪರೀಕ್ಷೆಗಳು ನಡೆಯಲಿವೆ. ಪಿಜಿ ಸಿಇಟಿ ಪರೀಕ್ಷೆ ಆಗಸ್ಟ್ 8,9ರಂದು ನಡೆಯಲಿದೆ ಎಂದು ಇದೇ ವೇಳೆ ಸಚಿವರು ಸ್ಪಷ್ಟನೆ ನೀಡಿದರು.