ಬೆಂಗಳೂರು: ಹಬ್ಬದ ಪ್ರಯುಕ್ತ ಪ್ರಯಾಣಿಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ದರ ಪಡೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಗೌರಿ ಗಣೇಶನ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಕೆಲವು ಧನದಾಹಿ ಖಾಸಗಿ ಬಸ್ಗಳು ನಿಗದಿತ ದರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಹಣ ವಸೂಲಿ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಖಾಸಗಿ ಬಸ್ಗಳು ರೂಟ್ಗೆ ನಿಗದಿ ಪಡಿಸಿದ ದರವನ್ನಷ್ಟೇ ಪ್ರಯಾಣಿಕರಿಂದ ಪಡೆಯಬೇಕು. ಒಂದು ವೇಳೆ ಯಾರಾದರೂ ಹೆಚ್ಚಿನ ಪ್ರಮಾಣದಲ್ಲಿ ದರವನ್ನು ಪಡೆದರೆ, ಅಂತಹ ಬಸ್ ಮಾಲೀಕರ ಮೇಲೆ ಯಾವುದೇ ಮುಲಾಜಿಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನಾನು ಈಗಲೂ ಖಾಸಗಿ ಬಸ್ ಮಾಲೀಕರಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಪ್ರಯಾಣಿಕರಿಗೆ ಹೊರೆಯಾಗದಂತೆ ನಿಗದಿಪಡಿಸಿದ ದರವನ್ನು ಮಾತ್ರ ತೆಗೆದುಕೊಳ್ಳಬೇಕು. ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ. ಅಕ್ರಮವಾಗಿ ಹಣ ಸಂಪಾದನೆಯೇ ಏಕೈಕ ಗುರಿ ಎಂದರೆ ಅಧಿಕಾರಿಗಳು ಕ್ರಮ ಕೈಗೊಳ್ಳಲು ಸಿದ್ಧರಾಗಿ ಎಂದು ಸಚಿವರು ಸೂಚಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಲೀಲೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ