ಬೆಂಗಳೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್ಆರ್ಟಿಸಿ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೇವೆ ನೀಡಲು ಮುಂದಾಗಿದೆ. ಸೆಪ್ಟೆಂಬರ್ 2ರಂದು ಗೌರಿ-ಗಣೇಶ ಹಬ್ಬ ಇರುವ ಕಾರಣ ಆಗಸ್ಟ್ 30, 31ರಂದು ಬೆಂಗಳೂರಿನಿಂದ 1,800 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ನಂತರ ರಾಜ್ಯದ ಮತ್ತು ಅಂತರ್ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಸೆಪ್ಟೆಂಬರ್ 2ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯಿತಿ ನೀಡಲಾಗುತ್ತಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ವಿಶೇಷ ಸೇವೆ ನೀಡಲಾಗುತ್ತಿದೆ.
ಇತ್ತ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಿಸಲಾಗುತ್ತಿದೆ. ತಮಿಳುನಾಡು ಮತ್ತು ಆಂಧ್ರ ಪ್ರದೇಶ/ತೆಲಂಗಾಣ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರ್ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಕಾರ್ಯಾಚರಣೆ ಮಾಡಲಾಗುತ್ತದೆ.