ಬೆಂಗಳೂರು: ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ರೀತಿಯ ಧಕ್ಕೆ ಆಗುವುದಿಲ್ಲ. ಇದರಿಂದ ರೈತರಿಗೆ ಹೆಚ್ಚು ಅನುಕೂಲವಾಗುತ್ತದೆ. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಕರೆದಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಲವತ್ತು ವರ್ಷಗಳ ಹಿಂದೆಯೇ ನಾನು ಶಿಕಾರಿಪುರ ಎಪಿಎಂಸಿ ಎದುರು ರೈತರಿಗಾಗಿ ಧರಣಿ ನಡೆಸಿ ಹೋರಾಟ ನಡೆಸಿದ್ದೆ. ರೈತರ ಹೆಸರಲ್ಲಿ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಕೃಷಿಗಾಗಿ ಮೊದಲ ಬಜೆಟ್ ಮಂಡಿಸಿದ್ದೇನೆ. ನಾನು ರೈತರಿಗೆ ಯಾವುದೇ ರೀತಿಯ ಅನ್ಯಾಯ ಮಾಡುವುದಿಲ್ಲ ಎಂದು ಹೇಳಿದರು.
ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು ತಪ್ಪು ಗ್ರಹಿಕೆ ಮಾಡಿಕೊಳ್ಳಲಾಗಿದೆ. ನಿನ್ನೆ ಪ್ರತಿಪಕ್ಷಗಳ ನಾಯಕರು ಹಾಗೂ ರೈತ ಮುಖಂಡರ ಜೊತೆ ದೂರವಾಣಿ ಮೂಲಕ ಮಾತನಾಡಿ ಕಾಯ್ದೆ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗಿದೆ ಎಂದರು.
ರೈತರಿಗೆ ತಾವು ಬೆಳೆದ ಉತ್ಪನ್ನಗಳಿಗೆ ಹೆಚ್ಚು ಬೆಲೆ ದೊರಕಬೇಕು ಎಂಬ ಏಕೈಕ ಉದ್ದೇಶದಿಂದ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುತ್ತಿದೆ. ಇದರಿಂದ ರೈತರಿಗೆ ಅಥವಾ ಎಪಿಎಂಸಿ ಕಮಿಟಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಕಾಯ್ದೆಯಿಂದ ಎಪಿಎಂಸಿ ಅಸ್ತಿತ್ವಕ್ಕೆ ಧಕ್ಕೆ ಆಗುವುದಿಲ್ಲ. ಎಪಿಎಂಸಿ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ ರೈತರೇ ಮೊದಲು ಎಂಬ ಘೋಷ ವಾಕ್ಯದ ಅನುಷ್ಠಾನ ಸಾಧ್ಯವಾಗುತ್ತದೆ. ರೈತರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿರುತ್ತಾರೆ. ಇದರಿಂದ ರೈತರಿಗೆ ತಮ್ಮ ಉತ್ಪನ್ನಗಳಿಗೆ ಯೋಗ್ಯ ಧಾರಣೆ ದೊರೆಯುವ ಅವಕಾಶ ಕಲ್ಪಿಸಿದಂತಾಗುತ್ತದೆ. ಈ ಕಾಯ್ದೆಯಿಂದ ಪಿಎಂಸಿ ಕಮಿಟಿಗಳ ಅಸ್ತಿತ್ವಕ್ಕೆ ಯಾವುದೇ ತಂದರೆ ಆಗುವುದಿಲ್ಲ. ಅವು ಹಿಂದಿನಂತೆ ಮುಂದುವರೆಯುತ್ತವೆ ಎಂದರು.
ಮಾರುಕಟ್ಟೆ ಪ್ರಾಂಗಣದ ಹೊರಗೆ ಅಧಿಸೂಚಿತ ಕೃಷಿ ಉತ್ಪನ್ನಗಳ ವಹಿವಾಟು ನಡೆಸಲು ಮತ್ತು ಮೇಲ್ವಿಚಾರಣೆಯನ್ನು ಕೃಷಿ ಮಾರಾಟ ನಿರ್ದೇಶಕರು ಮಾಡುತ್ತಾರೆ. ಈ ತಿದ್ದುಪಡಿ ಕಾಯ್ದೆಯಿಂದ ಎಪಿಎಂಸಿ ಕಮಿಟಿಗಳನ್ನು ಮಾರುಕಟ್ಟೆ ಪ್ರಾಂಗಣಕ್ಕೆ ಸೀಮಿತಗೊಳಿಸಿ ರೈತರು ಉತ್ತಮ ಧಾರಣೆ ಪಡೆಯಲು ಅವಕಾಶ ಒದಗಿಸಿ ಆ ಮೂಲಕ ರೈತರ ಬೆಳೆಗಳಿಗೆ ಸ್ಪರ್ಧಾತ್ಮಕ ಮಾರುಕಟ್ಟೆ ಒದಗಿಸಿ ರೈತರ ಹಿತ ಕಾಯಲು ಅವಕಾಶ ನೀಡುತ್ತದೆ ಎಂದು ಹೇಳಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗಾಗಲಿ, ಕೇಂದ್ರ ಸರ್ಕಾರಕ್ಕಾಗಲಿ ರೈತರ ಹಿತಾಸಕ್ತಿಯೇ ಮುಖ್ಯ. 2022ರ ವೇಳೆಗೆ ರೈತರ ಆದಾಯ ದ್ವಿಗುಣ ಮಾಡಬೇಕು. ರೈತರಿಗೆ ನೆರವಾಗಬೇಕು ಎನ್ನುವುದಕ್ಕಾಗಿಯೇ ಅನೇಕ ಕಾರ್ಯಕ್ರಮಗಳನ್ನು ಮತ್ತು ಸುಧಾರಣೆಗಳನ್ನು ಜಾರಿಗೆ ತರಲಾಗುತ್ತಿದೆ. ಈಗಲೂ ಎಪಿಎಂಸಿ ಕಾಯ್ದೆಯನ್ನೇನು ನಾವು ತೆಗೆದು ಹಾಕಿಲ್ಲ. ಕೇವಲ ಕಾಯ್ದೆಯ ಎರಡು ಸೆಕ್ಷನ್ಗಳಿಗೆ ತಿದ್ದುಪಡಿ ಮಾಡಿದ್ದೇವೆ. ಈ ಸುಧಾರಣೆಯಿಂದ ನಮ್ಮ ರೈತರಿಗೆ ಮಾರುಕಟ್ಟೆಯ ಹೆಚ್ಚಿನ ಆಯ್ಕೆಗಳು ಲಭಿಸಲಿವೆ. ನಮ್ಮ ರೈತರು ಎಪಿಎಂಸಿಯಾಗಲಿ ಅಥವಾ ಇತರೆ ವರ್ತಕರ ಅಧೀನಕ್ಕೆ ಒಳಪಡುವುದಿಲ್ಲ. ತಮ್ಮಿಷ್ಟದಂತೆ ಯಾರಿಗೆ ಬೇಕಾದರೂ ಉತ್ಪನ್ನ ಮಾರಾಟ ಮಾಡಬಹುದು ಎಂದು ವಿವರಿಸಿದರು.
ಬೆಂಬಲ ಬೆಲೆಗೆ ಕಡಿಮೆ ದರದಲ್ಲಿ ಖರೀದಿ ಮಾಡುವ ಎಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇವೆ. ಈ ಶೋಷಣೆಯನ್ನು ಇನ್ನು ಮುಂದೆ ತಪ್ಪಿಸಬಹುದು. ಇನ್ನು ಮುಂದೆ ಎಪಿಎಂಸಿಯಲ್ಲಿ ವ್ಯವಹಾರ ಮಾಡುವ ವರ್ತಕರು ರೈತರನ್ನು ಶೋಷಣೆ ಮಾಡುವುದು ತಪ್ಪುತ್ತದೆ. ಖಾಸಗಿಯವರೂ ಎಪಿಎಂಸಿ ಹೊರಗಡೆ ವ್ಯವಹಾರ ಮಾಡುವಾಗಲೂ ಕೂಡ ಷರತ್ತನ್ನು ಪಾಲಿಸಬೇಕಾಗುತ್ತದೆ. ಸರ್ಕಾರದ ಅನುಮತಿ ಪಡೆಯಬೇಕಾಗಿದೆ. ಇದೆಲ್ಲವನ್ನೂ ನಮ್ಮ ರೈತರ ಹಿತರಕ್ಷಣೆ, ಮಾರಾಟ ಸ್ವಾತಂತ್ರ್ಯ ನೀಡಲು ಮಾಡಲಾಗುತ್ತಿದೆ. ಆದರೆ ಕೆಲವರು ಇದರ ವಿರುದ್ಧ ಅಪಪ್ರಚಾರ ಮಾಡಿ ನಮ್ಮ ರೈತರ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ರೈತರ ಹಿತಕ್ಕೆ ಧಕ್ಕೆ ಬರುವುದಾದರೆ ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ನಾನು ಮುಖ್ಯಮಂತ್ರಿ ಸ್ಥಾನದಲ್ಲಿ ಒಂದು ಕ್ಷಣವೂ ಮುಂದುವರೆಯುವುದಿಲ್ಲ ಎಂದರು.