ಬೆಂಗಳೂರು : ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಹುದ್ದೆಗಳ ನೇಮಕಾತಿಗೆ ನಡೆಯುವ ಸ್ಮರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ನೀಡಿದ್ದ ನಿರಾಕ್ಷೇಪಣಾ ಪತ್ರ ರದ್ದು ಮಾಡಿರುವ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಕ್ರಮ ಪ್ರಶ್ನಿಸಿ ಬಸವರಾಜ ಕುಂಬಾರ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕೆಪಿಎಸ್‌ಸಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜ ಕುಂಬಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎನ್. ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿ ಸರ್ಕಾರಿ ಸೇವೆ ವಿಭಾಗಕ್ಕೆ ಸೇರಿದ ವಿಚಾರವಾಗಿದೆ. ಹೀಗಾಗಿ ಈ ಬಗ್ಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿಯಲ್ಲಿ (ಕೆಎಟಿ) ಅರ್ಜಿ ಸಲ್ಲಿಸಲು ಸೂಚಿಸಿ ಅರ್ಜಿ ವಜಾಗೊಳಿಸಿದೆ.
ಪ್ರಕರಣದ ಹಿನ್ನೆಲೆ...
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಎಫ್‌ಡಿಎ ಹುದ್ದೆಗಳ ಪರೀಕ್ಷೆಗೆ ಜ.24ರಂದು ಸ್ಪಧಾತ್ಮಕ ಪರೀಕ್ಷೆ ನಡೆಸಲು ಕೆಪಿಎಸ್‌ಸಿ ದಿನಾಂಕ ನಿಗದಿ ಪಡಿಸಿತ್ತು. ಈ ನಡುವೆ ಕೆಪಿಎಸ್‌ಸಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಿಬ್ಬಂದಿಯಿಂದ ಫೆ.23 ರಂದು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಿದ್ದ ಕೆಪಿಎಸ್‌ಸಿ, ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ 30 ಮಂದಿ ಅಭ್ಯರ್ಥಿಗಳಿಗೆ ಎಫ್‌ಡಿಎ ಪರೀಕ್ಷೆ ಬರೆಯಲು ನೀಡಿದ್ದ ನಿರಾಕ್ಷೇಪಣಾ ಪತ್ರವನ್ನು ರದ್ದು ಮಾಡಿತ್ತು. ಈ ಕ್ರಮ ಪ್ರಶ್ನಿಸಿ ಬಸವರಾಜ ಕುಂಬಾರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಎಫ್‌ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ರಮೇಶ್ ಮತ್ತು ಅರ್ಜಿದಾರ ಬಸವರಾಜ್ ಕುಂಬಾರ ಒಂದೇ ಕೋಣೆಯಲ್ಲಿ ನೆಲೆಸಿದ್ದರು. ಅಲ್ಲದೆ, ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಬಸವರಾಜು ನಂತರ ಜಾಮೀನು ಪಡೆದು ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದರು. ಕೆಪಿಎಸ್‌ಸಿ ನಿರಾಕ್ಷೇಪಣಾ ಪತ್ರ ರದ್ದು ಮಾಡಿರುವ ಕ್ರಮದಿಂದ ನನ್ನ ಉದ್ಯೋಗದ ಹಕ್ಕು ಮೊಟಕುಗೊಳಿಸಿದಂತಾಗಿದೆ. ಆದ್ದರಿಂದ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ ಕೋರಿದ್ದ ಅರ್ಜಿ ಹೈಕೋರ್ಟ್‌ನಲ್ಲಿ ವಜಾಗೊಳ್ಳುತ್ತಿದ್ದಂತೆ ಬಸವರಾಜ ಕುಂಬಾರ ಕೆಎಟಿಯಲ್ಲಿ ಅರ್ಜಿ ಸಲ್ಲಿಸಿ, ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕೋರಿದ್ದರು. ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಕೆಎಟಿ ಅಧ್ಯಕ್ಷ ನ್ಯಾ.ಆರ್.ಬಿ.ಬೂದಿಹಾಳ್ ಮತ್ತು ಆಡಳಿತಾತ್ಮಕ ಸದಸ್ಯ ಶಿವಶೈಲಂ ಅವರಿದ್ದ ಪೀಠ, ಪ್ರಕರಣದಲ್ಲಿ ಕೆಪಿಎಸ್‌ಸಿ ವಾದ ಆಲಿಸದೆ ಪರೀಕ್ಷೆಗೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟು ವಿಚಾರಣೆ ಮುಂದೂಡಿದೆ.