ಬೆಂಗಳೂರು: ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಫೈರೋಜ್ ಪಾಷಾ ಹಿಂದೆ ಕಾಂಗ್ರೆಸ್ನಲ್ಲಿ ಇದ್ದರು ಅಷ್ಟೇ.. ಈಗ ಅವರು ಎಸ್ಡಿಪಿಐ ಕಾರ್ಯಕರ್ತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಫೈರೋಜ್ ಪಾಷಾ ಕಾಂಗ್ರೆಸ್ ಕಾರ್ಯಕರ್ತ ಎಂಬ ಮಾಹಿತಿ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. ಆದರೆ ಅವರು ಕಾಂಗ್ರೆಸ್ ಬಿಟ್ಟು ಎಸ್ಡಿಪಿಐ ಸೇರ್ಪಡೆಯಾಗಿದ್ದಾರೆ. ಒಂದು ವರ್ಷದ ಹಿಂದೆಯೇ ಪಾಷಾ ಕಾಂಗ್ರೆಸ್ ತ್ಯಜಿಸಿದ್ದಾರೆ. ಅವರಿಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೂ ಈಗ ಯಾವುದೇ ಸಂಪರ್ಕ ಇಲ್ಲ. ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಕೂಡ ಇದೆ ವಿವರವನ್ನು ನೀಡಿದ್ದಾರೆ ಎಂದರು.
ಇದೇ ವಿಚಾರವಾಗಿ ಸಲೀಂ ಅಹ್ಮದ್ ನಿನ್ನೆ ಮಾಧ್ಯಮ ಪ್ರಕಟಣೆ ಕೂಡ ಬಿಡುಗಡೆ ಮಾಡಿದ್ದಾರೆ. ಅಲ್ಲಿಯೂ ಇದೇ ಮಾಹಿತಿ ಒದಗಿಸಿದ್ದ ಅವರು, ಗಲಭೆಗೆ ಕಾರಣರಾದವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದರು. ಕಾಂಗ್ರೆಸ್ ಪಕ್ಷ ಈ ನೆಲದ ಕಾನೂನು ಹಾಗೂ ಸಂವಿಧಾನಕ್ಕೆ ಗೌರವ ನೀಡುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭ 74ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಸಲೀಂ ಅಹಮದ್ ತಿಳಿಸಿದ್ದು, ಮಹಾತ್ಮ ಗಾಂಧಿ ಸೇರಿದಂತೆ ಹಲವು ನಾಯಕರು ಈ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಯಶಸ್ಸು ತಂದುಕೊಟ್ಟಿದ್ದಾರೆ. ಸ್ವಾತಂತ್ರ್ಯ ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ವಿಶೇಷವಾಗಿ ಯುವಕರು ಈ ವಿಚಾರದಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದದರು.