ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಅಂತಿಮವಾಗಿ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸದ ವಿಚಾರವಾಗಿ ಹೈಕೋರ್ಟ್, ಬೆಳಗಾವಿ ಪೊಲೀಸ್ ಆಯುಕ್ತರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆ ಬೆಳಗಾವಿ ಪೊಲೀಸ್ ಆಯುಕ್ತರು, ಸಭೆ ಆಯೋಜಿಸಿದ್ದ 6 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿರುವುದಾಗಿ ಹೈಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಕಳೆದ ಜನವರಿಯಲ್ಲಿ ಸಭೆ ನಡೆದಿದ್ದು, 5 ತಿಂಗಳಾದ ಬಳಿಕ ಜೂನ್ 14ರಂದು 6 ಮಂದಿ ಆಯೋಜಕರ ವಿರುದ್ಧ ಎಫ್ಐಆರ್ ದಾಖಲಿಸಿರುವುದಾಗಿ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕೋರಿ ಸಲ್ಲಿಸಿರುವ ಪಿಐಎಲ್ಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರಿ ವಕೀಲರು ಈ ಪ್ರಮಾಣ ಪತ್ರ ಸಲ್ಲಿಸಿದರು. ಬಳಿಕ ಪ್ರಕರಣದ ಕುರಿತು ಮಾಹಿತಿ ನೀಡಿದ ಅಡ್ವೊಕೇಟ್ ಜನರಲ್, ನ್ಯಾಯಾಲಯದ ನಿರ್ದೇಶನದಂತೆ ಸಭೆಯ 6 ಆಯೋಜಕರ ವಿರುದ್ಧ ಜೂನ್ 14ರಂದು ಎಫ್ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ಪ್ರವಾಹ ನಿಯಂತ್ರಣ ಸಂಬಂಧ ಬಿಎಸ್ವೈ ಜೊತೆ ಚರ್ಚಿಸಲಾಗುವುದು: ಮಹಾ ಸಚಿವ ಜಯಂತ್ ಪಾಟೀಲ್
ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಸಭೆಯಲ್ಲಿ ಅಷ್ಟೊಂದು ಜನರಿದ್ದರೂ ಕೇವಲ ಆರು ಜನರ ಮೇಲೆ ಏಕೆ ಎಫ್ಐಆರ್ ದಾಖಲಿಸಲಾಗಿದೆ, ಮಾಸ್ಕ್ ಹಾಕಿರದ ಪ್ರತಿಯೊಬ್ಬರ ಮೇಲೂ ಕ್ರಮ ಕೈಗೊಳ್ಳಬೇಕಲ್ಲವೇ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಎಜಿ, ತನಿಖೆ ನಂತರ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಹೇಳಿಕೆ ಪರಿಗಣಿಸಿದ ಪೀಠ, ಪ್ರಕರಣದ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.