ಬೆಂಗಳೂರು : ದೀಪಾವಳಿ ಸಂದರ್ಭದಲ್ಲಿ ಪರವಾನಿಗೆ ಇಲ್ಲದೇ ಪಟಾಕಿ ಮಾರಾಟ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ಕೊರೊನಾ ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ಚಾರ್ಟರ್ಡ್ ಅಕೌಂಟೆಂಟ್ ಡಾ.ಎ.ಎಸ್. ವಿಷ್ಣುಭರತ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಪಾಲಿಕೆ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.
ಅರ್ಜಿಯನ್ನು ನ.23ರಂದು ವಿಚಾರಣೆ ನಡೆಸಿದ್ದ ಪೀಠ, ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನಷ್ಟೇ ಮಾರಾಟ ಮಾಡಲಾಗಿದೆಯೇ ಎಂಬುದರ ಕುರಿತು ಹಾಗೂ ನಿಯಮ ಉಲ್ಲಂಘಿಸಿದವರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿತ್ತು.
ಇದನ್ನೂ ಓದಿ : ಸುರಕ್ಷಿತ ದೀಪಾವಳಿ: ಪಟಾಕಿ ಅವಘಡಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ
ಇಂದು ಅರ್ಜಿ ಮತ್ತೆ ವಿಚಾರಣೆಗೆ ಬಂದಾಗ ಬಿಬಿಎಂಪಿ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ದೀಪಾವಳಿ ಸಂದರ್ಭದಲ್ಲಿ ಪರವಾನಿಗೆ ಇಲ್ಲದೇ ಪಟಾಕಿ ಮಾರಾಟ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅಲ್ಲದೆ, ಪಟಾಕಿ ಖರೀದಿ ಹಾಗೂ ಮಾರಾಟಕ್ಕೆ ಬಂದ ವೇಳೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ದಂಡ ಹಾಕಲಾಗಿದೆ ಎಂದು ತಿಳಿಸಿದರು.
ಹೇಳಿಕೆ ದಾಖಲಿಸಿಕೊಂಡ ಪೀಠ, ಯಾವ ಕಾನೂನಿನಡಿ ಎಫ್‌ಐಆರ್ ದಾಖಲಿಸಲಾಗಿದೆ ಹಾಗೂ ದಂಡ ವಿಧಿಸಲಾಗಿದೆ ಎಂಬುದರ ಕುರಿತು ವಿವರಣೆ ನೀಡುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.