ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕಳೆದ ಬುಧವಾರ ಫ್ರೀಡಂಪಾರ್ಕ್ ಮುಂದೆ ಕೈಗೊಂಡಿದ್ದ ಪ್ರತಿಭಟನೆ ವೇಳೆ ವಶಕ್ಕೆ ಪಡೆಯಲು ಹೋದ ಮಹಿಳಾ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಮಹಿಳಾ ಕಾನ್‌ಸ್ಟೇಬಲ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 353ರ ಅಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ 323 ಅಡಿ ಹಲ್ಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬಲ ಪ್ರದರ್ಶಿಸಿದ್ರೇ ಶಾಸಕಿ ಸೌಮ್ಯರೆಡ್ಡಿ!?
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ರಾಜಭವನದವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು. ಮೆರವಣಿಗೆಯು ಫ್ರೀಡಂಪಾರ್ಕ್ ಬಳಿ ಬರುತ್ತಿದ್ದಂತೆ ಬ್ಯಾರಿಕೇಡ್ ಹಾಕಿ ಪೊಲೀಸರು ಕಾಂಗ್ರೆಸ್ ನಾಯಕರನ್ನು ತಡೆದು, ವಶಕ್ಕೆ ಪಡೆದುಕೊಂಡಿದ್ದರು.
ಇದನ್ನೂ ಓದಿ:ನಾನು ಹಲ್ಲೆ ಮಾಡಿಲ್ಲ, ಅವರೇ ನನ್ನ ಸೀರೆ, ಕೂದಲು ಎಳೆದರು: ಶಾಸಕಿ ಸೌಮ್ಯಾ ರೆಡ್ಡಿ
ಈ ವೇಳೆ ಸೌಮ್ಯರೆಡ್ಡಿ ವಶಕ್ಕೆ ಪಡೆಯಲು ಹೋದ ಮಹಿಳಾ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ್ದ ಸೌಮ್ಯರೆಡ್ಡಿ, ಮಹಿಳಾ ಪೊಲೀಸರ ಮೇಲೆ ನಾನು ಹಲ್ಲೆ ಮಾಡಿಲ್ಲ. ಬದಲಾಗಿ ಅವರೇ ನನ್ನ ಸೀರೆ, ಕೂದಲು ಎಳೆದಾಡಿದ್ದರು ಎಂದು ಹೇಳಿದ್ದರು.