ಬೆಂಗಳೂರು/ಬೆಳಗಾವಿ: ಇಂದು ಕಾಂಗ್ರೆಸ್ ಚುನಾವಣಾ ಸಮಿತಿಯ ಮೊದಲ ಸಭೆ ನಡೆಯಲಿದೆ. ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್ ಸಂಜೆ 6 ಗಂಟೆಗೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ನಲ್ಲಿ ನಡೆಯಲಿರುವ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿಎಲ್ಪಿ ನಾಯಕ ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ್ ಸೇರಿದಂತೆ ಸುಮಾರು 35ಕ್ಕೂ ಹೆಚ್ಚು ಮಂದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸೇರಿದಂತೆ ಹಲವು ವಿಚಾರಗಳ ಕುರಿತು ನಾಯಕರು ಚರ್ಚಿಸಲಿದ್ದಾರೆ.
ಈಗಾಗಲೇ 1250ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಟಿಕೆಟ್ಗಾಗಿ ಅರ್ಜಿ ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಸಮಾಲೋಚನೆ ನಡೆಸಲಿರುವ ಕಾಂಗ್ರೆಸ್ ನಾಯಕರು ವಿಶೇಷವಾಗಿ ಗಮನಹರಿಸಬೇಕಿದೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಬೆಂಬಲಿಗರು ಬಹುತೇಕ ಕ್ಷೇತ್ರಗಳಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದು ದಿನದಿಂದ ದಿನಕ್ಕೆ ತಮಗೆ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಮತ್ತು ಆಯ್ಕೆಯಾದ ಅಭ್ಯರ್ಥಿಯ ಪರ ಉಳಿದವರಲ್ಲಿ ಮಮತೆ ಮೂಡಿಸುವುದು ಕಾಂಗ್ರೆಸ್ ನಾಯಕರಿಗೆ ದೊಡ್ಡ ಸವಾಲಾಗಿದೆ.
![First Congress Election Committee meeting to be held in Belgaum District Congress](https://etvbharatimages.akamaized.net/etvbharat/prod-images/17241048_thumb.jpg)
ರಾಜ್ಯದ ಬಹುತೇಕ ಕ್ಷೇತ್ರಗಳಲ್ಲಿ ಬಂಡಾಯ ಹೆಚ್ಚಾಗುವ ಸಾಧ್ಯತೆ ಎದುರಾಗಿದ್ದು, ಇದರಿಂದಾಗಿ ಈಗಲೇ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್ ನಾಯಕರು ಮುಂದಿನ ಮೂರ್ನಾಲ್ಕು ತಿಂಗಳು ಬಂಡಾಯ ಶಮನಕ್ಕೆ ಹೆಚ್ಚಿನ ಆದ್ಯತೆ ನೀಡಲಿದ್ದಾರೆ. ಮುಂದಿನ ಸಿಎಂ ವಿಚಾರವಾಗಿ ಎದ್ದಿರುವ ಗೊಂದಲಗಳಿಗೆ ತೆರೆ ಎಳೆಯುವ ನಿಟ್ಟಿನಲ್ಲಿ ಹೈಕಮಾಂಡ್ ಮತ್ತೊಮ್ಮೆ ಕಟ್ಟುನಿಟ್ಟಾದ ಸೂಚನೆ ನೀಡಿದ್ದು, ಯಾವುದೇ ಕಾರಣಕ್ಕೂ ಮುಂದಿನ ದಿನಗಳಲ್ಲಿ ನಾಯಕರು ಸಿಎಂ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸದಂತೆ ತಿಳಿಸಿದ್ದಾರೆ.
ಕಳೆದ ಒಂದೆರಡು ವಾರದಿಂದ ಯಾವುದೇ ಪ್ರಸ್ತಾಪಗಳು ಕೇಳಿಬಂದಿಲ್ಲ. ಈ ವಿಚಾರವಾಗಿಯೂ ರಾಜ್ಯ ನಾಯಕರಿಗೆ ಇಂದು ಸುರ್ಜೇವಾಲಾ ಮತ್ತೊಮ್ಮೆ ಕಟ್ಟುನಿಟ್ಟಿನ ಸೂಚನೆ ನೀಡಲಿದ್ದಾರೆ ಎಂಬ ಮಾಹಿತಿ ಇದೆ. ಜೊತೆಗೆ ಚುನಾವಣಾ ರಣತಂತ್ರದ ಕುರಿತೂ ಮಹತ್ವದ ಚರ್ಚೆ ನಡೆಸಲಿರುವ ನಾಯಕರು ಸಾಧ್ಯವಾದಷ್ಟು ಒಗ್ಗಟ್ಟಿನ ಮಂತ್ರ ಜಪಿಸಲು ತೀರ್ಮಾನಿಸಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆಯಿಂದ ದೂರ ಉಳಿದ ಪರಮೇಶ್ವರ್