ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಹೋಮ್ ಐಸೋಲೇಷನ್ನಲ್ಲಿರುವ ಕೋವಿಡ್ ಸೋಂಕಿತರ ಕುಟುಂಬಗಳಿಗೆ ಆಹಾರ ಮತ್ತು ಔಷಧ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ,ಬೆಳಗಾವಿ, ಬಳ್ಳಾರಿ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿನ ಆಯ್ದ ಕೆಲ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಒಗಳ ಜತೆ ಬುಧವಾರ ನಡೆಸಿದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡ ಗೃಹ ಸಚಿವರು ಈ ಸೂಚನೆ ನೀಡಿದರು.
ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರ ಮನೆಗಳನ್ನು ಕಂಟೇನ್ಮೆಂಟ್ ಝೋನ್ಗಳೆಂದು ಪರಿಗಣಿಸಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ಕುಟುಂಬಗಳಿಗೆ ಅಗತ್ಯ ಔಷಧ ಹಾಗೂ ಪಡಿತರ ವ್ಯವಸ್ಥೆ ಮಾಡಬೇಕು. ಆಹಾರ ಎಂದರೆ ಕೇವಲ ಅಕ್ಕಿ ಅಷ್ಟೇ ಅಲ್ಲ, ಬೇಳೆ, ಬೆಲ್ಲ, ಎಣ್ಣೆ, ಉಪ್ಪು ನೀಡಿ. ಒಟ್ಟಿನಲ್ಲಿ ಹೋಮ್ ಐಸೋಲೇಷನ್ ನಲ್ಲಿರುವ ಕುಟುಂಬಗಳು ಮನೆಯಿಂದ ಹೊರ ಬಾರದೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದನ್ನು ಖಾತ್ರಿಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸೋಂಕಿತರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಿಕೊಳ್ಳಬೇಕು. ಉಸಿರಾಟದಲ್ಲಿ ಸ್ವಲ್ಪ ಏರುಪೇರು ಕಂಡು ಬಂದರೂ ತಕ್ಷಣ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಬೇಕು. ಮನೆಯಲ್ಲಿ ಐಸೋಲೇಷನ್ ಆಗಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಇಲ್ಲದಿದ್ದರೂ ತಡ ಮಾಡದೇ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗುವಂತೆ ಗ್ರಾಮೀಣ ಪ್ರದೇಶದ ಜನರಿಗೆ ಅರಿವು ಮೂಡಿಸಿ ಎಂದು ಸಭೆಯಲ್ಲಿ ಬೊಮ್ಮಾಯಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮನವಿ ಮಾಡಿದರು.