ಬೆಂಗಳೂರು: ನಗರದ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಅವಶ್ಯಕತೆ ಇರುವ ಬಡವರಿಗೆ ಆಹಾರ ಕಿಟ್ ಪೂರೈಕೆಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಮಂಗಳವಾರ ವಿಚಾರಣೆಗೆ ಹಾಜರಾಗಿ ಕ್ಷಮೆ ಕೋರಿದರು.
ಬಡವರಿಗೆ ಆಹಾರ ಕಿಟ್ಗಳನ್ನು ಪೂರೈಕೆ ಮಾಡದ ವಿಚಾರವಾಗಿ ಸರ್ಕಾರ ಮತ್ತು ಬಿಬಿಎಂಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದ ಹೈಕೋರ್ಟ್, ಮಂಗಳವಾರದ ಕಲಾಪದಲ್ಲಿ ಈ ಇಬ್ಬರು ಅಧಿಕಾರಿಗಳು ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಅಧಿಕಾರಿಗಳು ನ್ಯಾಯಪೀಠಕ್ಕೆ ಕ್ಷಮೆ ಕೋರಿದರು. ನಮ್ಮಿಂದ ತಪ್ಪಾಗಿದೆ, ಅದಕ್ಕಾಗಿ ನ್ಯಾಯಾಲಯದ ಕ್ಷಮೆಯಾಚಿಸುತ್ತೇವೆ. ಆಗಿರುವ ತಪ್ಪುಗಳನ್ನು ತಿದ್ದಿಕೊಂಡು ಕೋರ್ಟ್ ಆದೇಶಗಳನ್ನು ಪಾಲನೆ ಮಾಡುತ್ತೇವೆ ಎಂದರು.
ಅಲ್ಲದೆ, ಕಂಟೈನ್ಮೆಂಟ್ ಪ್ರದೇಶಗಳಲ್ಲಿನ ಬಡವರು ಹಾಗೂ ನಿರ್ಗತಿಕರನ್ನು ಗುರುತಿಸಿ ಅವರಿಗೆ ಆಹಾರ ಕಿಟ್ ಪೂರೈಸುತ್ತೇವೆ. ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುತ್ತೇವೆ. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಪರಿಗಣಿಸಿದ ಪೀಠ ಈ ವಿಚಾರದಲ್ಲಿ ನಗರಾಭಿವೃದ್ಧಿ ಇಲಾಖೆ ಮತ್ತು ಬಿಬಿಎಂಪಿಯು ಯಾವ ಕ್ರಮಗಳನ್ನು ಕೈಗೊಳ್ಳಲಿವೆ ಎಂಬುದನ್ನು ಸ್ಪಷ್ಟಪಡಿಸಿ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ಬಿಬಿಎಂಪಿ ಆಯುಕ್ತರು ಪೀಠಕ್ಕೆ ಮಾಹಿತಿ ನೀಡಿ, ನಗರದ ಕಂಟೈನ್ಮೆಂಟ್ ವಲಯಗಳಲ್ಲಿ ಒಟ್ಟು ಹತ್ತು ಸಾವಿರ ಬಡವರು ಹಾಗೂ ನಿರ್ಗತಿಕರನ್ನು ಗುರುತಿಸಿದ್ದೇವೆ. ಇವರಿಗೆ 25 ಸಾವಿರ ರೇಷನ್ ಕಿಟ್ಗಳನ್ನು ಖರೀದಿ ಮಾಡಲು ಆದೇಶಿಸಿದ್ದೇವೆ. ಬಡವರನ್ನು ಗುರುತಿಸಿ ಅವನ್ನು ತಲುಪಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.