ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಾಗೂ ನಿಗಮ ಮತ್ತು ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾಂಗರಿಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಆದೇಶ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ಜಿಸಿ ಚಂದ್ರಶೇಖರ್ ಮನವಿ ಮಾಡಿದ್ದಾರೆ.
ಈ ವಿಚಾರವಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎನ್ ವಿಜಯಭಾಸ್ಕರ್ ಅವರಿಗೆ ಕಾಂಗ್ರೆಸ್ ರಾಜ್ಯಸಭೆ ಸದಸ್ಯರಾಗಿರುವ ಚಂದ್ರಶೇಖರ್ ಪತ್ರ ಬರೆದು ಮನವಿ ಮಾಡಿದ್ದಾರೆ.
ಕೊರೊನಾ ವೈರಸ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೇಂದ್ರ ಸರ್ಕಾರವು ತನ್ನ ಅಧೀನ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾಂಗರಿಗೆ (ವಿಕಲಚೇತನರಿಗೆ) ಹಾಗೂ ಗರ್ಭಿಣಿಯರಿಗೆ ಮನೆಯಿಂದಲೇ ಕಾರ್ಯನಿರ್ವಹಿಸಲು ಆದೇಶ ಹೊರಡಿಸಿರುವುದು ನನ್ನ ಗಮನಕ್ಕೆ ಬಂದಿದೆ. ಅದರಂತೆ ರಾಜ್ಯ ಸರ್ಕಾರದ ಅಧೀನದಲ್ಲಿ ಸಂಸ್ಥೆಗಳು, ನಿಗಮ ಮತ್ತು ಮಂಡಳಿ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿವ್ಯಾಂಗರಿಗೆ (ವಿಕಲಚೇತನರಿಗೆ) ಹಾಗೂ ಗರ್ಭಿಣಿಯರ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಆದೇಶ ಹೊರಡಿಸುವುದು ಸೂಕ್ತ. ಕೇಂದ್ರ ಸರ್ಕಾರದ ಮಾದರಿಯಲ್ಲೇ ರಾಜ್ಯ ಸರ್ಕಾರವು ಕೂಡ ಸದರಿ ವಿಷಯವಾಗಿ ಆದೇಶ ಹೊರಡಿಸುವಂತೆ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಪತ್ರ ಬರೆದಿದ್ದಾರೆ.