ಬೆಂಗಳೂರು: ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಪರ ನಿರಂತರ ಪ್ರಚಾರ ಕೈಗೊಂಡು ಪ್ರಚಾರ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕುಟುಂಬ ಸಮೇತ ಕೆಲ ದಿನ ವಿಶ್ರಾಂತಿ ಪಡೆದುಕೊಳ್ಳಲು ಗೋವಾ ಪ್ರವಾಸ ಕೈಗೊಂಡಿದ್ದಾರೆ.
ಇಂದು ಕುಟುಂಬ ಸಮೇತರಾಗಿ ಗೋವಾಕ್ಕೆ ತೆರಳಿದ ಕುಮಾರಸ್ವಾಮಿ ಅವರು, ಮೂರು ದಿನಗಳ ಕಾಲ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರ 60ನೇ ವರ್ಷಕ್ಕೆ ಕಾಲಿಡುತ್ತಿರುವ ಕುಮಾರಸ್ವಾಮಿ ಅವರು ಹುಟ್ಟುಹಬ್ಬವನ್ನು ಗೋವಾದಲ್ಲಿಯೇ ಆಚರಿಸಿಕೊಳ್ಳಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಮೂರು ದಿನಗಳ ಕಾಲ ರಾಜಕೀಯ ಚಟುವಟಿಕೆಯಿಂದ ದೂರವಿದ್ದು, ರಿಲ್ಯಾಕ್ಸ್ ಪಡೆದುಕೊಳ್ಳಲಿದ್ದಾರೆ. ನಂತರ ರಾಜ್ಯಕ್ಕೆ ಆಗಮಿಸಿ ಪಕ್ಷದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಉಪಚುನಾವಣೆಯಲ್ಲಿ ಮಣಿಸಲು ಅವಿರತವಾಗಿ ಓಡಾಟ ನಡೆಸಿದ್ದರು. ನಿರಂತರವಾಗಿ ಉಪಚುನಾವಣೆ ನಡೆದ ಕ್ಷೇತ್ರಗಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಆಯಾಸಗೊಂಡಿದ್ದರು.
ಇತ್ತೀಚೆಗೆ ಅನಾರೋಗ್ಯಕ್ಕೊಳಗಾಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದರು. ನಗರದಲ್ಲಿ ನೆಲೆಸಿದ್ದರಿಂದ ಪ್ರತಿನಿತ್ಯ ಕಾರ್ಯಕರ್ತರು, ನಾಯಕರು ಕುಮಾರಸ್ವಾಮಿ ಅವರನ್ನು ಭೇಟಿ ಮಾಡುತ್ತಿದ್ದರು. ಇದರಿಂದ ವಿಶ್ರಾಂತಿ ಪಡೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಗೋವಾಕ್ಕೆ ತೆರಳಿ ಅಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.