ಬೆಂಗಳೂರು: ರಾಜ್ಯ ಅನ್ಲಾಕ್ನತ್ತ ಸಾಗುತ್ತಿದ್ದು, ಸಿಎಂ ಯಡಿಯೂರಪ್ಪ ರೈಲಿನ ಮೂಲಕವೇ ದ್ವಿಪಥ ರೈಲ್ವೆ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗೋಷ್ಟಿ ನಡೆಸುತ್ತಿದ್ದ ವೇಳೆ ಮಹಿಳಾ ಮಾಜಿ ಕಾರ್ಪೊರೇಟರ್ನ್ನು ಬರ್ಬರವಾಗಿ ಕೊಲೆ ಪ್ರಕರಣದ ಕುರಿತು ಖಡಕ್ ಮಾತುಗಳನ್ನಾಡಿದ್ದಾರೆ.
ಚಲವಾದಿ ಪಾಳ್ಯದ ಮಾಜಿ ಕಾರ್ಪೊರೇಟ್ ರೇಖಾ ಕದಿರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರೇಖಾ ಕದಿರೇಶ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ನಗರ ಪೊಲೀಸ್ ಆಯುಕ್ತರ ಜೊತೆ ಮಾತನಾಡಿದ್ದೇನೆ. ಈ ಹಿಂದೆ ಅವರ ಪತಿಯನ್ನು ಇದೇ ರೀತಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈಗಲೂ ಅದೇ ರೀತಿ ಅವರ ಪತ್ನಿಯನ್ನು ಹತ್ಯೆ ಮಾಡಲಾಗಿದೆ. 24ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದರು.
ಚಲವಾದಿ ಪಾಳ್ಯ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅಂಜನಪ್ಪ ಗಾರ್ಡನ್ ಬಳಿ ಬಡವರಿಗೆ ಫುಡ್ ಕಿಟ್ ವಿತರಿಸುತ್ತಿದ್ದರು. ಈ ವೇಳೆ ಇಬ್ಬರು ದುಷ್ಕರ್ಮಿಗಳು ರೇಖಾ ಅವರನ್ನು ಕೊಲೆ ಮಾಡುವ ಉದ್ದೇಶದಿಂದಾಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಮಾಜಿ ಕಾರ್ಪೊರೇಟರ್ ಕತ್ತು ಮತ್ತು ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ನರಳಾಡಿದ್ದಾರೆ. ಸ್ಥಳೀಯರು ಈ ಮಾಹಿತಿಯನ್ನು ಪೊಲೀಸರಿಗೆ ರವಾನಿಸಿದ್ದಾರೆ. ಸುದ್ದಿ ತಿಳಿದಾಕ್ಷಣವೇ ಸ್ಥಳಕ್ಕೆ ಚಿಕ್ಕಪೇಟೆ ಎಸಿಪಿ ಮತ್ತು ಕಾಟನ್ ಪೇಟೆ ಪೊಲೀಸರು ದೌಡಾಯಿಸಿ, ಗಂಭೀರವಾಗಿ ಗಾಯಗೊಂಡಿದ್ದ ರೇಖಾರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಹೆಚ್ಚಿನ ರಕ್ತ ಸ್ರಾವದಿಂದ ರೇಖಾ ಸಾವನ್ನಪ್ಪಿದ್ದಾರೆ. ಈ ಘಟನೆ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.