ಬೆಂಗಳೂರು: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಎಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸವದಿ ಅವರನ್ನು ಬರಮಾಡಿಕೊಂಡರು. ಪಕ್ಷದ ಶಾಲು ಹೊದಿಸಿ ಬಾವುಟ ನೀಡಿ ಬರಮಾಡಿಕೊಂಡರು. ಸಾಕಷ್ಟು ದೊಡ್ಡ ಸಂಖ್ಯೆಯಲ್ಲಿ ಸವದಿ ಅಭಿಮಾನಿಗಳು ಕಾಂಗ್ರೆಸ್ ಕಚೇರಿಯಲ್ಲಿ ಉಪಸ್ಥಿತರಿದ್ದರು. ಲಕ್ಷ್ಮಣ್ ಸವದಿ ಜೊತೆ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಅಥಣಿ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ತಮ್ಮ ಬದಲು ಮಹೇಶ್ ಕುಮಟಳ್ಳಿಗೆ ಬಿಜೆಪಿ ಪಕ್ಷ ಆದ್ಯತೆ ನೀಡಿದ್ದರಿಂದ ಬೇಸರಗೊಂಡು ಪಕ್ಷ ತ್ಯಜಿಸಲು ತೀರ್ಮಾನಿಸಿದ್ದರು. ಬಿಜೆಪಿ ವಿಧಾನಪರಿಷತ್ ಸದಸ್ಯರು ಆಗಿದ್ದ ಸವದಿ ಇಂದು ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ನಾಯಕರನ್ನ ಭೇಟಿಯಾಗಿ ಪಕ್ಷ ಸೇರುವ ಅಂತಿಮ ಸುತ್ತಿನ ಮಾತುಕತೆ ನಡೆಸಿದ್ದರು. ಇದಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಹೊರಗೆ ತೆರಳಿದ್ದ ಅವರು ಇನ್ನಷ್ಟು ಸಮಾಲೋಚನೆ ನಡೆಸಿದ ಬಳಿಕ ಸಂಜೆ ನಾಲ್ಕು ಗಂಟೆಗೆ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿವಾನಂದ ವೃತ್ತ ಸಮೀಪ ಇರುವ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ನಿವಾಸಕ್ಕೆ ತೆರಳಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ತಮ್ಮ ಬಿಜೆಪಿ ಸದಸ್ಯತ್ವದ ರಾಜೀನಾಮೆ ಪತ್ರವನ್ನು ಸಹ ರವಾನಿಸಿದ್ದರು.
ಅಥಣಿ ವಿಧಾನಸಭಾ ಕ್ಷೇತ್ರದಿಂದ 2004, 2018 ಹಾಗೂ 2013ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ವಿಧಾನಸಭೆಗೆ ಪ್ರವೇಶಿಸಿದ್ದ ಲಕ್ಷ್ಮಣ್ ಸವದಿ 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ ಸೋಲ ಅನುಭವಿಸಿದ್ದರು. ಇದಾದ ಬಳಿಕ 2019ರಲ್ಲಿ ನಡೆದ ಆಪರೇಷನ್ ಕಮಲದಲ್ಲಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮಹೇಶ್ ಕುಮಟಳ್ಳಿ ಬಿಜೆಪಿ ಬೆಂಬಲಕ್ಕೆ ನಿಂತರು. ಉಪಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದ ಕುಮಟಳ್ಳಿ ಸುಲಭವಾಗಿ ಗೆಲುವು ಸಾಧಿಸಿದರು. 2019 ರಲ್ಲಿ ರಚನೆಯಾದ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಲಕ್ಷ್ಮಣ ಸವದಿಗೆ ಡಿಸಿಎಂ ಪಟ್ಟ ನೀಡಲಾಯಿತು. ನಂತರ ಇವರನ್ನ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಿ ಶಾಸಕ ಸ್ಥಾನ ಕಲ್ಪಿಸಲಾಗಿತ್ತು. 2023 ವಿಧಾನಸಭೆ ಚುನಾವಣೆಯಲ್ಲಿ ಮಹೇಶ್ ಕುಮಟಳ್ಳಿ ಬದಲು ತಮಗೆ ಟಿಕೆಟ್ ಸಿಗಬಹುದು ಎಂದು ನಿರೀಕ್ಷಿಸಿದ್ದ ಲಕ್ಷ್ಮಣ್ ಸವದಿಗೆ ಬಿಜೆಪಿ ನಿರಾಸೆ ಮೂಡಿಸಿದೆ. ಈ ಹಿನ್ನೆಲೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ನಿರ್ಧಾರ ಕೈಗೊಂಡ ಅವರು ಅಂತಿಮವಾಗಿ ಕಮಲ ಪಕ್ಷ ತೊರೆದು ಕೈ ಹಿಡಿದಿದ್ದಾರೆ.
ಇದನ್ನೂ ಓದಿ : ಇಂದು ಸಂಜೆ ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುತ್ತೇನೆ: ಲಕ್ಷ್ಮಣ ಸವದಿ