ಬೆಂಗಳೂರು: ವಿದೇಶಗಳಲ್ಲಿ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗಾಗಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಶಾಂತಿ ನಗರದ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಆಗಮಿಸಿದರು.
ಸಿಂಗಾಪುರ ಸೇರಿದಂತೆ ವಿದೇಶಗಳಲ್ಲಿ ಕೆ.ಜೆ.ಜಾರ್ಜ್ ಅವರು ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಇದೆ. ಇನ್ನು ಕೆಲವು ಕಂಪನಿಗಳಲ್ಲಿ ಅವರು ಷೇರುದಾರರು ಕೂಡಾ ಆಗಿದ್ದಾರೆ ಎಂಬ ದೂರಿದೆ. ಕೋಟ್ಯಂತರ ರೂ. ಮೌಲ್ಯದ ಆಸ್ತಿಯಿದ್ದರೂ ಲೋಕಾಯುಕ್ತಕ್ಕೆ ವಿದೇಶಗಳಲ್ಲಿರುವ ಆಸ್ತಿ ವಿವರ ತೋರಿಸಲಿರಲಿಲ್ಲ ಎನ್ನಲಾಗಿದೆ.
ಹೀಗಾಗಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ದಾಖಲೆ ಸಮೇತ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣಾ ರೆಡ್ಡಿ ಎರಡು ತಿಂಗಳ ಹಿಂದೆ ಇಡಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಸಂಬಂಧ ದೂರನ್ನು ಪರಿಶೀಲಿಸಿ ಸತ್ಯಾ ಸತ್ಯತೆ ಕಂಡುಕೊಳ್ಳುವ ದೃಷ್ಟಿಯಿಂದ ಜಾರ್ಜ್ ಅವರಿಗೆ ಕಳೆದ ಎರಡು ದಿನಗಳ ಹಿಂದೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು. ಈ ಹಿನ್ನೆಲೆ ಇಂದು ವಿಚಾರಣೆಗೆ ಜಾರ್ಜ್ ಹಾಜರಾಗಿದ್ದಾರೆ.