ಬೆಂಗಳೂರು: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಭೇಟಿ ಸಂದರ್ಭ ತಾವು ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದ ಅವಧಿಯಲ್ಲಿ ನೀಡಿದ್ದ ಅನೇಕ ಯೋಜನೆಗಳು ಅರ್ಧಕ್ಕೆ ನಿಂತಿವೆ. ತಾವು ಸಚಿವರಾಗಿ ಬಿಡುಗಡೆ ಮಾಡಿಸಿದ್ದ ಅನುದಾನ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಮುಂದಿನ ಚುನಾವಣೆ ವೇಳೆಗೆ ನಾವು ಈ ಹಿಂದೆ ನೀಡಿದ್ದ ಭರವಸೆಗಳು ಈಡೇರದಿದ್ದರೆ ಚುನಾವಣೆಗೆ ಸ್ಪರ್ಧಿಸುವುದು ಹಾಗೂ ಗೆಲ್ಲುವುದು ಕಷ್ಟ ಸಾಧ್ಯವಾಗಲಿದೆ. ಹೀಗಾಗಿ ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ಘೋಷಣೆಯಾದ ಯೋಜನೆಗಳು ಹಾಗೂ ನಂತರ ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಡುಗಡೆಯಾದ ಅನುದಾನಗಳು, ಇತ್ಯಾದಿಗಳ ಬಗ್ಗೆ ತಾವು ಗಮನಹರಿಸಿ ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಆದ್ಯತೆಯ ಮೇರೆಗೆ ಇವನ್ನು ಪ್ರಸ್ತಾಪಿಸಬೇಕು ಎಂದು ಡಿಕೆ ಶಿವಕುಮಾರ್ಗೆ ಪ್ರಮೋದ್ ಮಧ್ವರಾಜ್ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವಾಗಿ ಸ್ಪಂಧಿಸಿದ ಡಿಕೆಶಿ ತಾವು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಳಿಕ ಪಂಚಾಯಿತಿ ನೂತನ ಅಧ್ಯಕ್ಷ ವಿ. ಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬುಧವಾರ ರಾತ್ರಿ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಎ. ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.
ನ.20 ರಂದು ಅಧ್ಯಕ್ಷರಾಗಿ ವಿ ಪ್ರಸಾದ್ ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಅಧ್ಯಕ್ಷ ಸ್ಥಾನ ಲಭಿಸಿದ್ದು, ಒಟ್ಟು 21 ಸದಸ್ಯ ಬಲದ ಪಂಚಾಯತ್ನಲ್ಲಿ 17 ಸದಸ್ಯರ ಬೆಂಬಲ ಪಡೆದ ವಿ. ಪ್ರಸಾದ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.