ಬೆಂಗಳೂರು : ಐ ಮಾನಿಟರಿ ಅಡ್ವೈಸರಿ ಸಂಸ್ಥೆಯ ಬಹುಕೋಟಿ ವಂಚನೆ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಮತ್ತೆ ಸಿಬಿಐ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶಿಸಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ರೋಷನ್ ಬೇಗ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು. ಈ ವೇಳೆ ಸಿಬಿಐ ಪರ ವಕೀಲರು ವಾದಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ರೋಷನ್ ಬೇಗ್ ಅವರಿಂದ ಮತ್ತಷ್ಟು ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುವ ಅಗತ್ಯವಿದೆ. ಆದರೆ, ಅವರು ಅನಾರೋಗ್ಯದ ಕಾರಣ ಆಸ್ಪತ್ರೆ ಸೇರಿದ್ದರಿಂದ ವಿಚಾರಣೆಗೆ ಒಳಪಡಿಸಲು ಸಾಧ್ಯವಾಗಿರಲಿಲ್ಲ.
ಪ್ರಕರಣದಲ್ಲಿ 36ನೇ ಆರೋಪಿಯಾಗಿರುವ ರೋಷನ್ ಬೇಗ್ ಅವರಿಗೆ ಹಣ ವರ್ಗಾವಣೆಯಾಗಿರುವ ಸಂಬಂಧ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ ಆರೋಪಿಯನ್ನು ವಶಕ್ಕೆ ನೀಡಬೇಕು ಎಂದು ಕೋರಿದರು.
ಇದನ್ನೂ ಓದಿ : ಜಯದೇವ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತ್ತೆ ಜೈಲಿಗೆ ಶಿಫ್ಟ್ ಆದ ರೋಷನ್ ಬೇಗ್
ಜತೆಗೆ ಆರೋಪಿ ಆರೋಗ್ಯ ಸ್ಥಿರವಾಗಿದೆ ಎಂಬುದಕ್ಕೆ ಪೂರಕವಾಗಿ ವೈದ್ಯಕೀಯ ವರದಿ ಸಲ್ಲಿಸಿದರು. ವಾದ ಆಲಿಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಅವರು ಹೆಚ್ಚಿನ ವಿಚಾರಣೆ ನಡೆಸಲು ಅನುಮತಿಸಿ ಆರೋಪಿ ರೋಷನ್ ಬೇಗ್ ಅವರನ್ನು ನಾಳೆ ಸಂಜೆ 5 ಗಂಟೆವರೆಗೂ ಸಿಬಿಐ ವಶಕ್ಕೆ ನೀಡಿ ಆದೇಶಿಸಿದರು. ಇದೇ ವೇಳೆ ರೋಷನ್ ಬೇಗ್ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಬಿಐ ಪರ ವಕೀಲರಿಗೆ ಸೂಚಿಸಿದ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 4 ಕ್ಕೆ ಮುಂದೂಡಿತು.