ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಹೃದಯ ಸಂಬಂಧಿ ಸಮಸ್ಯೆಯಿಂದ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಬೆಳಗ್ಗೆ 10 ಗಂಟೆಗೆ ಜಮಿರ್ ಲಘು ಹೃದಯಾಘಾತಕ್ಕೆ ತುತ್ತಾಗಿದ್ದರು. ತಕ್ಷಣ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮೀರ್ ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಸ್ಟಂಟ್ ಹಾಕಿರುವ ವೈದ್ಯರು, ಚಿಕಿತ್ಸೆ ಮುಂದುವರಿಸಿದ್ದಾರೆ. ಕುಟುಂಬದವರ ಮಾಹಿತಿ ಪ್ರಕಾರ ಜಮೀರ್ ಅಹ್ಮದ್ ಚೇತರಿಸಿಕೊಳ್ಳುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಜಮೀರ್ ಅಹ್ಮದ್ಗೆ ಸೋಂಕು ಆಗದಿರಲಿ ಎನ್ನುವ ಕಾರಣದಿಂದ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಪ್ರವೇಶಾವಕಾಶ ನೀಡಿಲ್ಲ. ಇದರಿಂದ ಮಾಜಿ ಸಚಿವರ ಭೇಟಿ ಸಾಧ್ಯವಾಗಿಲ್ಲ. ಆದರೆ ಅವರು ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.
ಮೂಲಗಳ ಪ್ರಕಾರ ಜಮೀರ್ ಅಹ್ಮದ್ ಆರೋಗ್ಯ ಸಾಕಷ್ಟು ಚೇತರಿಕೆ ಕಂಡಿದ್ದು, ನಾಳೆ ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಈಗಾಗಲೇ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತ ಘಟಕ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜಿಮ್ ಕೂಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.