ಬೆಂಗಳೂರು: ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಿಪಿಎಲ್ ಕಾರ್ಡ್ದಾರರಿಗೆ 75 ಯುನಿಟ್‌ವರೆಗೆ ನೀಡುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ನಗರ ಪ್ರದೇಶಕ್ಕೂ ವಿಸ್ತರಿಸಲಾಗಿದೆ. ಈ ಯೋಜನೆಯನ್ನು ಗ್ರಾಮೀಣ ಭಾಗಕ್ಕೆ ಮಾತ್ರ ಸೀಮಿತಗೊಳಿಸಿ ಸರ್ಕಾರ ಮೇ 13ರಂದು ಆದೇಶ ಹೊರಡಿಸಿತ್ತು. ಹಳೆ ಆದೇಶವನ್ನು ಹಿಂದಕ್ಕೆ ಪಡೆದು ಸರ್ಕಾರ ಹೊಸ ಆದೇಶ ಮಾಡಿದೆ.
ಇದೀಗ ನಗರ ಪ್ರದೇಶಕ್ಕೂ ವಿಸ್ತರಿಸಿರುವುದರಿಂದ ರಾಜ್ಯಾದ್ಯಂತ ಈ ಯೋಜನೆ ಜಾರಿಯಾದಂತಾಗಿದೆ. ಮೇ 1ರಿಂದಲೇ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿದ್ದು, ಪರಿಶಿಷ್ಟ ಜಾತಿ ಹಾಗೂ ಪಂಗಡದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಗೃಹ ಬಳಕೆದಾರರು ಇನ್ನು ಮುಂದೆ 75 ಯುನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯಲಿದ್ದಾರೆ. ಮಾಸಿಕ ವಿದ್ಯುತ್ ಬಿಲ್ಲನ್ನು ನಿಗದಿತ ಅವಧಿಯೊಳಗೆ ಸಂಪೂರ್ಣವಾಗಿ ಪಾವತಿಸಿದ ನಂತರ ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ 75 ಯುನಿಟ್‌ನ ಹಣ ಮರು ಪಾವತಿಸಲಾಗುವುದು.
ಮೀಟರ್ ಅಳವಡಿಕೆ ಕಡ್ಡಾಯವಾಗಿದ್ದು ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್ ಮತ್ತು ಜಾತಿ ಪ್ರಮಾಣ ಪತ್ರದ ದೃಢೀಕೃತ ದಾಖಲೆಗಳನ್ನು ಒದಗಿಸಬೇಕು. ವಿದ್ಯುತ್ ಸರಬರಾಜು ಕಂಪನಿಗಳಿಗೆ ಬ್ಯಾಂಕ್ ಖಾತೆಯ ಸಂಖ್ಯೆ ನೀಡಬೇಕು. ಏಪ್ರಿಲ್ 30ರೊಳಗೆ ಬಾಕಿ ಇರುವ ವಿದ್ಯುತ್ ಶುಲ್ಕವನ್ನು ಸಂಪೂರ್ಣವಾಗಿ ಪಾವತಿಸಿದರೆ ಮಾತ್ರ ಸೌಲಭ್ಯ ಪಡೆಯಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ಸ್ವಾವಲಂಬಿ: 1.5 ತಿಂಗಳಲ್ಲಿ 831 ಮಿ.ಯೂ. ಹೆಚ್ಚುವರಿ ವಿದ್ಯುತ್ ಮಾರಾಟ