ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ ಎಸ್ ಆರ್ ಟಿ ಸಿ)ವು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಮಾಡಿದೆ. ಈ ಶೈಕ್ಷಣಿಕ ವರ್ಷದಲ್ಲಿ ಮಾರ್ಚ್ 9 ರಿಂದ ಕರ್ನಾಟಕದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಹಿನ್ನೆಲೆಯಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಅಲ್ಲಿಂದ ಹಿಂತಿರುಗಲು ಕೆಎಸ್‌ಆರ್‌ಟಿಸಿ ಉಚಿತ ಬಸ್ ವ್ಯವಸ್ಥೆ ಮಾಡಿದೆ.
ಸೆಕೆಂಡ್ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ತಮ್ಮ ವಾಸ ಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಮತ್ತು ಹಿಂದಿರುಗುವಾಗ ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿದರೆ ನಿಗಮದ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: 2023ರ ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಕೆ ಎಸ್ ಆರ್ ಟಿ ಸಿ ಗೆ ಪತ್ರ ಬರೆದು ಉಚಿತ ಬಸ್ ವ್ಯವಸ್ಥೆ ಮಾಡುವಂತೆ ಕೋರಿದ್ದರು. ಈ ನಿಟ್ಟಿನಲ್ಲಿ ನಿಗಮ ಇದೀಗ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆದೇಶ ಹೊರಡಿಸಿದೆ. ಜೊತೆಗೆ ನಿಗಮದ ಎಲ್ಲಾ ಚಾಲಕ ಮತ್ತು ನಿರ್ವಾಹಕರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸ ಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿ ನೀಡಲು ಕೆಎಸ್‌ಆರ್‌ಟಿಸಿ ನಿಗಮ ಸೂಚಿಸಿದೆ.
ಇದನ್ನೂ ಓದಿ: ದ್ವಿತೀಯ ಪಿಯು ಪರೀಕ್ಷೆ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆಗೆ ಸರ್ಕಾರ ತೀರ್ಮಾನ
ಮಾರ್ಚ್ 9 ರಿಂದ ಪರೀಕ್ಷೆ ಪ್ರಾರಂಭ: ಸೆಕೆಂಡ್ ಪಿಯುಸಿ 2023 ರ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದು, ಮಾರ್ಚ್ 9ರ ಗುರುವಾರ ಆರಂಭವಾಗುವ ಪರೀಕ್ಷೆಯು ಮಾರ್ಚ್ 29ರ ತನಕ ನಡೆಯಲಿದೆ. ಮಧ್ಯದಲ್ಲಿ ಒಟ್ಟು 7 ದಿನಗಳಲ್ಲಿ ಪರೀಕ್ಷೆಗಳು ಇರುವುದಿಲ್ಲ. ಒಟ್ಟು 36 ವಿವಿಧ ವಿಷಯಗಳು, ಭಾಷೆಗೆ ಸಂಬಂಧಿಸಿದಂತೆ ಪರೀಕ್ಷೆಗಳು ನಡೆಯಲಿವೆ.
ಇದನ್ನೂ ಓದಿ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ : ಉಡುಪಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ