ಬೆಂಗಳೂರು: ರಾಜ್ಯದ ಅಂಧ ವಿದ್ಯಾರ್ಥಿಗಳಿಗೆ ಉಚಿತ ‘ಟಾಕಿಂಗ್ ಲ್ಯಾಪ್‌ಟಾಪ್’ ವಿತರಿಸಲು ಸಮಗ್ರ ಯೋಜನೆ ರೂಪಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
ನ್ಯಾಯಾಲಯದ ಆದೇಶದ ನಂತರವೂ ಅರ್ಹ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್ ವಿತರಿಸಲು ಸರ್ಕಾರ ಯೋಜನೆ ರೂಪಿಸಿಲ್ಲ ಎಂದು ಆಕ್ಷೇಪಿಸಿ ವಕೀಲ ಎಸ್. ಉಮಾಪತಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಮಾಹಿತಿಯನ್ನು ಆಧರಿಸಿ ನ್ಯಾಯಾಂಗ ನಿಂದನೆ ಪ್ರಕರಣವನ್ನು ಕೈಬಿಟ್ಟಿತು.
ಅಂಧ ವಿದ್ಯಾರ್ಥಿಗಳಿಗೆ ಉಚಿತ ಟಾಕಿಂಗ್ ಲ್ಯಾಪ್ ಟಾಪ್ ವಿತರಿಸುವ ಯೋಜನೆಯನ್ನು 2014ರ ಜುಲೈನಲ್ಲಿ ಜಾರಿಗೆ ತಂದು 2017ರವರೆಗೆ ಕೆಲವು ವಿದ್ಯಾರ್ಥಿಗಳಿಗೆ ವಿತರಿಸಲಾಗಿದ್ದು, ನಂತರದ ವರ್ಷಗಳಲ್ಲಿ ಸ್ಥಗಿತಗೊಳಿಸಲಾಗಿದೆ. ಇದರಿಂದ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ಸಿಗುತ್ತಿಲ್ಲ ಎಂದು ಆರೋಪಿಸಿ ಎಸ್. ಉಮಾಪತಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಿದ್ದರು.
ಅರ್ಜಿಯನ್ನು ಮಾರ್ಚ್ 18ರಂದು ಇತ್ಯರ್ಥಪಡಿಸಿದ್ದ ಹೈಕೋರ್ಟ್, ಉಚಿತ ಟಾಕಿಂಗ್ ಲ್ಯಾಪ್‌ಟಾಪ್ ವಿತರಣೆಗೆ ಸರ್ಕಾರ 1 ತಿಂಗಳ ಒಳಗೆ ಸಮಗ್ರ ಯೋಜನೆ ರೂಪಿಸಬೇಕು ಎಂದು ತಿಳಿಸಿತ್ತು. ಆದರೆ, 3 ತಿಂಗಳು ಕಳೆದರೂ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಆಕ್ಷೇಪಿಸಿ ಉಮಾಪತಿ ಕಳೆದ ಜುಲೈ 6ರಂದು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದರು.
ಓದಿ: ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆ ಜಾರಿ ವಿಚಾರ; ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ವಿವರಣೆ ಕೇಳಿದ ಹೈಕೋರ್ಟ್