ಬೆಂಗಳೂರು: ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಣಿವಣ್ಣನ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ.
ಎಂ.ಮಹೇಶ್ವರ್ ರಾವ್ ಅವರನ್ನು ಈ ಎರಡು ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ. ಮಹೇಶ್ವರ್ ರಾವ್ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರಿಗೆ ಹೆಚ್ಚುವರಿಯಾಗಿ ಕಾರ್ಮಿಕ ಇಲಾಖೆ ಹಾಗೂ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಜವಾಬ್ದಾರಿ ನೀಡಲಾಗಿದೆ.
ಪಿ.ಮಣಿವಣ್ಣನ್ ಅವರನ್ನು ಎರಡೂ ಇಲಾಖೆಯಿಂದ ಎತ್ತಂಗಡಿ ಮಾಡಿ, ಯಾವುದೇ ಸ್ಥಳ ನಿಯೋಜನೆಗೊಳಿಸದೆ ಇರುವುದು ಅಚ್ಚರಿಗೆ ಕಾರಣವಾಗಿದೆ. ಪಿ.ಮಣಿವಣ್ಣನ್ ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ವೇತನ ನೀಡದ ಕೈಗಾರಿಕೋದ್ಯಮಿಗಳಿಗೆ ನೋಟಿಸ್ ಜಾರಿ ಮಾಡುವುದಾಗಿ ಟ್ವೀಟ್ ಮಾಡಿದ್ದರು.
ಇದಕ್ಕೆ ಕೈಗಾರಿಕೋದ್ಯಮಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಕಾರ್ಮಿಕರು ದೂರು ಸಲ್ಲಿಸಲು ಸ್ಚತಃ ಮಣಿವಣ್ಣನ್ ಪ್ರೇರೇಪಿಸುತ್ತಿದ್ದಾರೆ ಎಂದು ಕೈಗಾರಿಕೋದ್ಯಮಿಗಳು ಆರೋಪಿಸಿದ್ದರು. ಬಳಿಕ ಮಣಿವಣ್ಣನ್ ತಮ್ಮ ನಿಲುವಿನಿಂದ ಹಿಂದೆ ಸರಿದಿದ್ದರು. ಕಾರ್ಮಿಕ ಸಚಿವರ ಗಮನಕ್ಕೂ ತಾರದೆ ಈ ರೀತಿ ನಿರ್ಧಾರ ಕೈಗೊಂಡಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು.