ಬೆಂಗಳೂರು: ಬಳ್ಳಾರಿಯಲ್ಲಿ ಅಸೋಸಿಯೇಟೆಡ್ ಮೈನಿಂಗ್ ಕಂಪನಿ ನಡೆಸಿದ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾ ಅವರನ್ನು ಕೈಬಿಟ್ಟಿದ್ದ ಸಿಬಿಐ ವಿಶೇಷ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ಪುರಸ್ಕರಿಸಿದೆ.
ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಅವರಿದ್ದ ಏಕ ಸದಸ್ಯ ಪೀಠ, ಈ ಆದೇಶ ನೀಡಿದೆ.
ಪೀಠ ತನ್ನ ತೀರ್ಪಿನಲ್ಲಿ ಲಕ್ಷ್ಮಿ ಅರುಣಾ ಅವರು ಅಸೋಸಿಯೇಟೇಡ್ ಮೈನಿಂಗ್ ಕಂಪನಿಯ ದಾಖಲೆಗೆ ಸಹಿ ಹಾಕಿದ್ದಾರೆ. ಇದೊಂದೇ ಕಾರಣಕ್ಕಾಗಿ ಅವರು ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದ್ದಾರೆಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಹೀಗಾಗಿ, ಪ್ರಕರಣದಿಂದ ಲಕ್ಷ್ಮಿ ಅರುಣಾ ಅವರ ಹೆಸರು ಕೈಬಿಟ್ಟ ಸಿಬಿಐ ನ್ಯಾಯಾಲಯದ ಆದೇಶ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟಿದೆ.
ಪ್ರಕರಣದ ಹಿನ್ನೆಲೆ:
ಅಸೋಸಿಯೇಟೆಡ್ ಮೈನಿಂಗ್ ಕಂಪನಿ ಬಳ್ಳಾರಿಯಲ್ಲಿ ಅಕ್ರಮ ಗಣಗಾರಿಕೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಸಿಬಿಐ ತನಿಖಾಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಇದರಲ್ಲಿ ಜನಾರ್ದನ ರೆಡ್ಡಿ ಮೊದಲನೆ ಆರೋಪಿಯಾಗಿದ್ದರೆ, ಅವರ ಪತ್ನಿ ಲಕ್ಷ್ಮಿ ಅರುಣಾ ಎರಡನೇ ಆರೋಪಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಲಕ್ಷ್ಮಿ ಅರುಣಾ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯಲ್ಲಿ ಅಸೋಸಿಯೇಟೆಡ್ ಕಂಪನಿಗೆ ತಾವು ಮಾಲೀಕರಲ್ಲ. ಅದರ ಉಸ್ತುವಾರಿಯನ್ನು ಹೊಂದಿಲ್ಲ. ಪಾಲುದಾರಿಕೆ ಹೊಂದಿದ್ದೇವೆ ಎಂಬ ಕಾರಣಕ್ಕೆ ಕಂಪನಿ ಮೇಲಿನ ಆರೋಪವನ್ನು ತಮ್ಮ ಮೇಲೆ ಹೊರಿಸಿರುವುದು ಸರಿಯಲ್ಲ. ಆದ್ದರಿಂದ ತಮ್ಮ ವಿರುದ್ಧದ ಆರೋಪಗಳನ್ನು ಕೈ ಬಿಡಬೇಕು ಎಂದು ಕೋರಿದ್ದರು. ಮನವಿ ಪುರಸ್ಕರಿಸಿದ್ದ ಸಿಬಿಐ ಕೋರ್ಟ್, ಆರೋಪಗಳನ್ನು ಕೈಬಿಟ್ಟು 2015ರ ಆ.8ರಂದು ಆದೇಶಿಸಿತ್ತು. ಈ ಆದೇಶ ರದ್ದು ಕೋರಿ ಹಿರೇಮಠ್ 2017ರಲ್ಲಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದರು.