ಬೆಂಗಳೂರು : ಆಟಿಕೆ, ಹೂ ಮತ್ತಿತರೆ ವಸ್ತುಗಳನ್ನು ಮಾರಲು ಚಿಕ್ಕ ಮಕ್ಕಳನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಸಮೀಕ್ಷೆ ನಡೆಸಲು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನೆರವು ಪಡೆದುಕೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತು ಲೆಟ್ಜ್ ಕಿಟ್ ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ.
ಈ ಹಿಂದೆ ನೀಡಿದ್ದ ಆದೇಶ ಪಾಲಿಸಲು ಕಾಲಾವಕಾಶ ನೀಡುವಂತೆ ಸರ್ಕಾರ ಮತ್ತು ಬಿಬಿಎಂಪಿ ಪರ ವಕೀಲರು ಕಾಲಾವಕಾಶ ಕೋರಿದ ಹಿನ್ನೆಲೆ ಕೆಎಸ್ಎಲ್ಎಸ್ಎ ನೆರವು ಪಡೆಯಲು ಕೋರ್ಟ್ ಸೂಚಿಸಿದೆ. ಅಲ್ಲದೆ, ಪ್ರಾಧಿಕಾರವನ್ನು ಪ್ರತಿವಾದಿಯನ್ನಾಗಿ ಸೇರಿಸುವಂತೆ ಆದೇಶಿಸಿದೆ.
ಹಿಂದಿನ ವಿಚಾರಣೆ ವೇಳೆ, ಮಕ್ಕಳನ್ನು ರಸ್ತೆಗಳಲ್ಲಿ ವ್ಯಾಪಾರ ಮಾಡಲು ಬಳಸಿಕೊಳ್ಳುತ್ತಿರುವುದು ಅತ್ಯಂತ ಗಂಭೀರ ವಿಚಾರ ಹಾಗೂ ಸಂವಿಧಾನದ ವಿಧಿ 21ರ ಉಲ್ಲಂಘನೆಯಾಗಿದೆ. ಆದ್ದರಿಂದ ಸರ್ಕಾರ ಮತ್ತು ಬಿಬಿಎಂಪಿ ಇಂಥ ಮಕ್ಕಳನ್ನು ಗುರುತಿಸಬೇಕು.
ಎಲ್ಲಿ ಮತ್ತು ಎಷ್ಟು ಮಕ್ಕಳು ಹೀಗೆ ಬಳಕೆಯಾಗುತ್ತಿದ್ದಾರೆ ಎಂಬುದರ ನಿಖರ ಮಾಹಿತಿ ಸಂಗ್ರಹಿಸಬೇಕು. ಈ ಕಾರ್ಯಕ್ಕೆ ಎನ್ಜಿಒಗಳ ನೆರವು ಪಡೆಯಬಹುದು. ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ವ್ಯವಸ್ಥೆ ಮಾಡಲು ಅಗತ್ಯ ಕ್ರಮಗಳನ್ನು ಜರುಗಿಸಬೇಕು. ಸೂಕ್ತ ವ್ಯವಸ್ಥೆ ಕಲ್ಪಿಸುವ ಸಂಬಂಧ ಯೋಜನೆ ರೂಪಿಸಿ ಆ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನಿರ್ದೇಶಿಸಿತ್ತು.