ಬೆಂಗಳೂರು: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲು ಅಧಿಸೂಚನೆ ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ.
ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯ ಸರ್ಕಾರ ಅಕ್ಟೋಬರ್ 8ರಂದು ಅಧಿಸೂಚನೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ 25 ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು ತಕರಾರು ಅರ್ಜಿಗಳನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಸರ್ಕಾರದ ಅಧಿಸೂಚನೆ ರದ್ದುಪಡಿಸಿತ್ತು. ಇದೇ ವೇಳೆ ರಾಜ್ಯ ಸರ್ಕಾರದ ಮೇಲ್ಮನವಿ ಸಲ್ಲಿಸಲು ಅವಕಾಶ ಕೋರಿದ್ದರಿಂದ ತನ್ನ ಆದೇಶಕ್ಕೆ ಹತ್ತು ದಿನಗಳ ಕಾಲ ತಡೆಯಾಜ್ಞೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದೆ. ಹಾಗೆಯೇ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸುವಂತೆ ಕೋರಿ ಮೆಮೊ ಸಲ್ಲಿಸಿದೆ. ಮಂಗಳವಾರ ವಿಭಾಗೀಯ ಪೀಠದ ಎದುರು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.
ಏಕಸದಸ್ಯ ಪೀಠ, ಸರ್ಕಾರ ಮೀಸಲು ನಿಗದಿಪಡಿಸುವ ವೇಳೆ ರೊಟೇಶನ್ ನಿಯಮಗಳನ್ನು ಪಾಲಿಸಿಲ್ಲ ಎಂದು ಅಭಿಪ್ರಾಯಪಟ್ಟು ಅಧಿಸೂಚನೆಯನ್ನು ರದ್ದುಪಡಿಸಿತ್ತು. ಅಲ್ಲದೆ ನಾಲ್ಕು ವಾರಗಳಲ್ಲಿ ರೊಟೇಷನ್ ನಿಯಮಗಳ ಅನುಸಾರ ಹೊಸದಾಗಿ ಅಧಿಸೂಚನೆ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.