ಬೆಂಗಳೂರು: ರಾಜ್ಯದಲ್ಲಿ ಒಂದರಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ನಿಷೇಧಿಸುವುದಾಗಿ ರಾಜ್ಯ ಸರ್ಕಾರ ಜೂನ್ 15ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ವಿವಿಧ ಶಾಲೆಗಳಲ್ಲಿ ಪ್ರಾಥಮಿಕ ತರಗತಿಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಪೋಷಕರು ಸಲ್ಲಿಸಿರುವ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಈ ವೇಳೆ ಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ ಪೀಠ, ನಿಯಮಿತ ಅವಧಿಗೆ ಸೀಮಿತವಾಗಿ ಆನ್‍ಲೈನ್ ಶಿಕ್ಷಣಕ್ಕೆ ಅನುಮತಿ ನೀಡಲು ಸರ್ಕಾರ ಸಿದ್ಧವಿದೆಯೇ? ಅದೇ ರೀತಿ ರಾಜ್ಯದ ಶಿಕ್ಷಣ ಕಾಯ್ದೆ ವ್ಯಾಪ್ತಿಗೆ ಒಳಪಡದ ಸಿಬಿಎಸ್‍ಸಿ ಮತ್ತು ಐಸಿಎಸ್‍ಸಿ ಪಠ್ಯಕ್ರಮದ ಶಾಲೆಗಳಿಗೆ ರಾಜ್ಯ ಸರ್ಕಾರದ ಈ ಆದೇಶ ಅನ್ವಯವಾಗುತ್ತದೆಯೇ? ಎಂಬ ಬಗ್ಗೆ ವಿವರಣೆ ನೀಡುವಂತೆ ನಿರ್ದೇಶಿಸಿ, ವಿಚಾರಣೆಯನ್ನು ಜೂ.26ಕ್ಕೆ ಮುಂದೂಡಿತು.
ಪಿಐಎಲ್ ಸಾರಾಂಶ: ಶಿಕ್ಷಣ ತಜ್ಞರ ಸಮಿತಿ ನೀಡಿದ ಅಭಿಪ್ರಾಯ ಆಧರಿಸಿ 1ರಿಂದ 5ನೇ ತರಗತಿಯ ಆನ್‍ಲೈನ್ ಶಿಕ್ಷಣವನ್ನು ನಿಷೇಧಿಸುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆನ್‍ಲೈನ್ ಶಿಕ್ಷಣ ಅಗತ್ಯವಿದೆ. ಶಾಲಾ ಆಡಳಿತ ಮಂಡಳಿಗಳು ಪೋಷಕರೊಂದಿಗೆ ಇನ್ನೂ ಚರ್ಚೆ ನಡೆಸುತ್ತಿರುವಾಗಲೇ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ. ಈ ಕುರಿತು ಅಭಿಪ್ರಾಯ ಹೇಳಲು ಸಮರ್ಪಕ ಅವಕಾಶವನ್ನೂ ನೀಡಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಮಕ್ಕಳ ಶಿಕ್ಷಣ ಮುಂದುವರಿಸಲು ಪರ್ಯಾಯ ವ್ಯವಸ್ಥೆಯನ್ನೂ ಸೂಚಿಸಿಲ್ಲ. ಏಕ ಪಕ್ಷೀಯವಾಗಿ ತೆಗೆದುಕೊಂಡಿರುವ ಸರ್ಕಾರದ ಈ ನಿರ್ಧಾರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಆದ್ದರಿಂದ ಮಕ್ಕಳಿಗೆ ಆನ್‍ಲೈನ್ ಶಿಕ್ಷಣ ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸಬೇಕು. ಅರ್ಜಿ ಇತ್ಯರ್ಥಗೊಳ್ಳುವವರೆಗೆ ಆದೇಶಕ್ಕೆ ತಡೆ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.