ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಪಟ್ಟಿಗೆ ಸೇರ್ಪಡೆಯಾಗಿರುವ 'ತಳವಾರ' ಮತ್ತು 'ಪರಿವಾರ' ಜಾತಿಗಳನ್ನು ರಾಜ್ಯದ ಹಿಂದುಳಿದ ವರ್ಗಗಳ ಮೀಸಲಾತಿ (ಒಬಿಸಿ) ಜಾತಿ ಪಟ್ಟಿಯಿಂದ ಕೈಬಿಡಲಾಗಿದೆ. ಈ ಕುರಿತು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ 2020ರ ಮಾರ್ಚ್ 19ರಂದು ತಳವಾರ ಮತ್ತು ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ರಾಜ್ಯಪತ್ರ ಹೊರಡಿಸಿತ್ತು. ಆದರೆ, ಕೆಲವು ಗೊಂದಲಗಳು ಸೃಷ್ಟಿಯಾಗಿದ್ದವು. ಕೇಂದ್ರ ಸರ್ಕಾರವು ಕಳೆದ ಮಾರ್ಚ್‌ನಲ್ಲಿ ಪ್ರಕಟಿಸಿದ ಗೆಜೆಟಿಯರ್‌ನಲ್ಲಿ ನಾಯಕದ, ನಾಯಕ್ ಪರ್ಯಾಯ ಪದಗಳಾದ ಪರಿವಾರ ಹಾಗೂ ತಳವಾರ ಜಾತಿಗಳನ್ನು ಒಳಗೊಂಡಂತೆ ಪರಿಶಿಷ್ಟ ಪಂಗಡಕ್ಕೆ ಸೇರಿದ ಜನರಿಗೆ ಪರಿಶಿಷ್ಟ ವರ್ಗದ ಜಾತಿ ಪ್ರಮಾಣಪತ್ರ ನೀಡಬಹುದು ಎಂದು ಹೇಳಿತ್ತು.
ಇನ್ನು, ರಾಜ್ಯ ಸರ್ಕಾರ ಕಳೆದ ಜೂನ್‌ನಲ್ಲಿ ಹೊರಡಿಸಿದ್ದ ಸುತ್ತೋಲೆ ಹಾಗೂ ಆಗಸ್ಟ್ನಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿ ಪರಿಶಿಷ್ಟ ಪಂಗಡದ ಪರಿವಾರ ಹಾಗೂ ತಳವಾರ ಜಾತಿಗಳಿಗೆ ಜಾತಿ ಪ್ರಮಾಣಪತ್ರ ನೀಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿತ್ತು. ಆದರೂ ಈ ವರ್ಗಗಳಿಗೆ ಸೇರಿದ ವ್ಯಕ್ತಿಗಳು ಜಾತಿ ಪ್ರಮಾಣಪತ್ರ ಪಡೆಯಲು ತೊಂದರೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಸ್ಪಷ್ಟನೆ ನೀಡಿತ್ತು. ನಿಯಾಮನುಸಾರ ನೈಜವಾದ ಪರಿಶಿಷ್ಟ ಪಂಗಡದ ಜಾತಿಗೆ ಸೇರಿದ ಪರಿವಾರ ಹಾಗೂ ತಳವಾರ ಜಾತಿ ವ್ಯಕ್ತಿಗಳಿಗೆ ಯಾವುದೇ ತೊಂದರೆಯಾಗದಂತೆ ಹಾಗೂ ನಿಗದಿತ ಅವಧಿಯೊಳಗೆ ಜಾತಿ ಪ್ರಮಾಣ ಪತ್ರ ನೀಡುವಂತೆ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಸಮಾಜ ಕಲ್ಯಾಣ ಇಲಾಖೆ ಸೂಚಿಸಿತ್ತು.
(ಓದಿ: ಬಹುನಿರೀಕ್ಷಿತ ಎಸ್ಸಿ ಎಸ್ಟಿ ಮೀಸಲು ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಅಧಿಸೂಚನೆ ಹೊರಡಿಸಿದ ಸರ್ಕಾರ)