ಬೆಂಗಳೂರು : ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ. ಬರೀ ಹೇಳಿಕೆಗಳಲ್ಲಷ್ಟೇ.. ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಕೊರೊನಾ ಮಾರ್ಗಸೂಚಿಗಳ ಉಲ್ಲಂಘನೆ ಕುರಿತ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ವಿಚಾರದಲ್ಲಿ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಜರುಗಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿತು.
ರಾಜ್ಯದಲ್ಲಿ ನಿತ್ಯವೂ 9 ಸಾವಿರ ಕೋವಿಡ್ ಪ್ರಕರಣ ದಾಖಲಾಗುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೆ 3 ಸಾವಿರ ಪ್ರಕರಣ ಪತ್ತೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಆದರೆ, ಗಣ್ಯರಿಂದ ನಿರಂತರ ನಿಯಮಗಳು ಉಲ್ಲಂಘನೆಯಾಗುತ್ತಿವೆ. ಗಣ್ಯರ ವಿಚಾರದಲ್ಲಿ ಸರ್ಕಾರ ಕಟ್ಟುನಿಟ್ಟಾಗಿ ವರ್ತಿಸದೆ ತಾರತಮ್ಯ ಎಸಗುತ್ತಿದೆ.
ಆದರೆ, ಸರ್ಕಾರ ಯಾವುದೇ ಲೋಪವಾಗುತ್ತಿಲ್ಲ ಎಂಬಂತೆ ನ್ಯಾಯಾಲಯಕ್ಕೆ ಮಾಹಿತಿ ನೀಡುತ್ತಿದೆ. ಸಚಿವ ಸುಧಾಕರ್ ಖಾಸಗಿ ಈಜುಕೊಳ ಬಳಸಿದ ವಿಚಾರ ಹಾಗೂ ಚಾಮುಂಡಿ ಬೆಟ್ಟಕ್ಕೆ ಗಣ್ಯರಿಗೆ ಅನುಮತಿ ಬಗ್ಗೆ ಸರ್ಕಾರ ನೀಡಿರುವ ಸ್ಪಷ್ಟನೆ ತೃಪ್ತಿಕರವಾಗಿಲ್ಲ. ಹೀಗಾಗಿ, ನಿಯಮಗಳ ಕುರಿತು ಸ್ಪಷ್ಟನೆ ನೀಡಬೇಕು ಎಂದು ಸೂಚಿಸಲಾಯಿತು.
ಕೋವಿಡ್ ಮಾರ್ಗಸೂಚಿಗಳ ಪಾಲನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಅಧಿಕಾರಿಗಳಿಗೆ ಸೂಚಿಸಬೇಕು. ವಿಶೇಷವಾಗಿ ಧಾರ್ಮಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳನ್ನು ಕಡ್ಡಾಯಗೊಳಿಸಿ, ಆಗಾಗ ಪರಿಶೀಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಮುಂದೂಡಿತು.