ಬೆಂಗಳೂರು: ಪರಿಶಿಷ್ಟ ಜಾತಿಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ, ಒಳ ಮೀಸಲಾತಿ ಹಂಚಿಕೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಸಲ್ಲಿಕೆಯಾಗಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ಎರಡು ವಾರಗಳ ಕಾಲಾವಕಾಶ ಕೋರಿದೆ. ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯ ಅಧ್ಯಕ್ಷ ಬೆಂಗಳೂರಿನ ಎಚ್.ರವಿ ಎಂಬುವರು ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ಬೇಕು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಮನವಿಗೆ ಸ್ಪಂಧಿಸಿದ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸಲು ಎರಡು ವಾರಗಳ ಕಾಲ ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿತು. ಈ ಹಿಂದೆ ಅರ್ಜಿ ವಿಚಾರಣೆ ವೇಳೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿತ್ತು.
ಇದನ್ನೂ ಓದಿ:ಅಪ್ರಾಪ್ತೆ ಮೇಲೆ ಅತ್ಯಾಚಾರ: ವಿಚಾರಣಾಧೀನ ನ್ಯಾಯಾಲಯದ ಖುಲಾಸೆ ಆದೇಶ ರದ್ದು
ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಹೆಚ್. ವಿ. ಮಂಜುನಾಥ, ಕಾನೂನು ಸಚಿವರಾಗಿದ್ದ ಜೆ ಸಿ ಮಾಧುಸ್ವಾಮಿಯವರ ಅಧ್ಯಕ್ಷತೆಯ ಸಚಿವ ಸಂಪುಟದ ಉಪಸಮಿತಿ ಯಾವುದೇ ಅಧ್ಯಯನ ನಡೆಸದೇ ಆತುರವಾಗಿ ನೀಡಿದ ವರದಿಯನ್ನು ಆಧರಿಸಿ ಪರಿಶಿಷ್ಟ ಜಾತಿಗಳನ್ನು ವರ್ಗೀಕರಿಸಿ ಒಳ ಮೀಸಲಾತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಪಾರಸು ಮಾಡುವುದಕ್ಕೆ ನಿರ್ಧರಿಸಿದೆ. ಈ ನಿರ್ಧಾರದಿಂದ ಬಂಜಾರ, ಭೋವಿ, ಕೊರಮ, ಕೊರಚ ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗಲಿದೆ. ಹೀಗಾಗಿ ಸರ್ಕಾರದ ನಿರ್ಧಾರವನ್ನು ರದ್ದು ಪಡಿಸಬೇಕು ಎಂದು ಕೋರಿದರು.
ಪ್ರಕರಣದ ಹಿನ್ನೆಲೆ ಏನು?: ಸಚಿವ ಸಂಪುಟ ಉಪ ಸಮಿತಿಯ ಶಿಫಾರಸು ಆಧರಿಸಿ 2023ರ ಮಾ.27ರಂದು ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿ ವರ್ಗೀಕರಿಸಿ ಆದೇಶ ಮಾಡಿತ್ತು. ಈ ವರ್ಗೀಕರಣವನ್ನು ರಾಜ್ಯಪಾಲರ ಒಪ್ಪಿಗೆಯ ಬಳಿಕ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧರಿಸಿದೆ. ಸಚಿವ ಸಂಪುಟ ಉಪ ಸಮಿತಿಯು 101 ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಶೇ.17 ಮೀಸಲಾತಿಯನ್ನು 4 ವರ್ಗಗಳನ್ನಾಗಿ ಪ್ರತ್ಯೇಕಿಸಿ ಮೀಸಲಾತಿ ಹಂಚಿಕೆ ಮಾಡಿದೆ.
ಯಾವುದೇ ತತ್ವ ಹಾಗೂ ಹಿಂದುಳಿದಿರುವಿಕೆ ಆಧಾರವಿಲ್ಲದೇ ಹಾಗೂ ಪೂರಕ ದತ್ತಾಂಶ ಸಂಗ್ರಹಿಸದೆ 101 ಪರಿಶಿಷ್ಟ ಜಾತಿಗಳನ್ನು 4 ವರ್ಗಗಳಾಗಿ ವಿಂಗಡಿಸಲಾಗಿದೆ. ಇದು ಅತಾರ್ಕಿಕ, ಅವೈಜ್ಞಾನಿಕ ಮತ್ತು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಆಕ್ಷೇಪಣೆ ವ್ಯಕ್ತ ಪಡಿಸಿದ್ದು, ಒಳಮೀಸಲಾತಿ ಹಂಚಿಕೆ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದರು.