ಬೆಂಗಳೂರು: ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಹೆಚ್ಚಾಗುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಕೆಲಸದ ಸಮಯ ಬದಲಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ನಾಳೆಯಿಂದ ಜಾರಿಗೆ ಬರುವಂತೆ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸರ್ಕಾರಿ ಕಚೇರಿಗಳಲ್ಲಿನ ಕೆಲಸದ ಸಮಯವನ್ನು ಬೆಳಗ್ಗೆ 8-00 ಗಂಟೆಯಿಂದ ಮಧ್ಯಾಹ್ನ 1-30 ಗಂಟೆವರೆಗೆ ಬದಲಾವಣೆ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇದಕ್ಕೂ ಮುನ್ನ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪಮಾನ ತೀವ್ರವಾಗಿರುವ ಕಾರಣ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸರ್ಕಾರಿ ಕಚೇರಿ ಕೆಲಸದ ಸಮಯವನ್ನು ಬೆಳಗ್ಗೆ 8-00ರಿಂದ ಮಧ್ಯಾಹ್ನ 1-30ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಮನವಿ ಪತ್ರ ಸಲ್ಲಿಸಿದ್ದರು.
ಆದರೆ, ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಹಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಕಛೇರಿ ಕೆಲಸದ ಸಮಯವನ್ನು ಬದಲಾವಣೆ ಮಾಡುವ ಅಗತ್ಯವಿಲ್ಲ ಎಂಬ ನಿರ್ಧಾರಕ್ಕೆ ಬರಲಾಗಿತ್ತು. ಬಳಿಕ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಮತ್ತೆ ಪತ್ರ ಬರೆದು ರಾಜ್ಯ ಸರ್ಕಾರಿ ನೌಕರರ ಆರೋಗ್ಯ ದೃಷ್ಟಿಯಿಂದ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬೇಸಿಗೆಯಲ್ಲಿ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ ಸರ್ಕಾರಿ ಕಚೇರಿ ಕೆಲಸದ ಸಮಯವನ್ನು ಬದಲಾಯಿಸುವಂತೆ ಮನವಿ ಮಾಡಿದ್ದರು.
ಇದನ್ನು ಪುರಸ್ಕರಿಸುವ ಸರ್ಕಾರ ಸಮಯ ಬದಲಾಯಿಸಿ ಆದೇಶ ಹೊರಡಿಸಿದೆ. ಸರ್ಕಾರಿ ನೌಕರರು ಬದಲಾದ ಕಚೇರಿ ಸಮಯದಲ್ಲಿ ತಮ್ಮ ಕರ್ತವ್ಯಗಳನ್ನು ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ನಿರ್ವಹಿಸಬೇಕೆಂದು ಸೂಚಿಸಲಾಗಿದೆ. ಜೊತೆಗೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಕೆಲಸ ನಿರ್ವಹಿಸಲು ಸೂಚಿಸಿದ ಸಂದರ್ಭದಲ್ಲಿ (ವಿಶೇಷವಾಗಿ ಕೋವಿಡ್) ಕಚೇರಿ ಸಮಯ ಬದಲಾವಣೆ ಅನ್ವಯಿಸುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಇದನ್ನೂ ಓದಿ: ಕೈಗೆ ಬಂದ ತುತ್ತು ಬಾಯಿಗೆ ಬರಲ್ಲ.. ಸಿದ್ದರಾಮಯ್ಯ ಕಾರಿಗೆ ಮುತ್ತಿಗೆ ಹಾಕಿ ತಮ್ಮ ಅಳಲು ತೋಡಿಕೊಂಡ ರೈತರು!