ಬೆಂಗಳೂರು : ಲಾಕ್ ಡೌನ್ ಸಡಿಲಿಕೆ ಬಳಿಕ ರಾಜ್ಯದ ಶಕ್ತಿ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧ ಸಹಜ ಸ್ಥಿತಿಯತ್ತ ಮರಳುತ್ತಿದೆ.
ಕೊರೊನಾ ಲಾಕ್ಡೌನ್ ಹಿನ್ನೆಲೆ ಆರೋಗ್ಯ, ಪೊಲೀಸ್ ಸೇರಿದಂತೆ ಅಗತ್ಯ ಸೇವೆಗಳನ್ನು ಪೂರೈಸುವ ಇಲಾಖೆಗಳು ಹೊರತುಪಡಿಸಿ ಉಳಿದೆಲ್ಲ ಇಲಾಖಾ ಕಚೇರಿಗಳ ಕೆಲಸ ಕಾರ್ಯ ಸ್ಥಗಿತಗೊಳಿಸಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಮಾಡಿರುವುದರಿಂದ ಸರ್ಕಾರಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭ ಮಾಡಿವೆ. ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಹೀಗಾಗಿ, ವಿಧಾನಸೌಧ, ವಿಕಾಸಸೌಧ, ಎಂ.ಎಸ್ ಬಿಲ್ಡಿಂಗ್ ಸೇರಿದಂತೆ ಸಚಿವಾಲಯದ ವಿವಿಧ ಇಲಾಖೆಗಳು ಮತ್ತೆ ಸಹಜ ಸ್ಥಿತಿಗೆ ಹಿಂದಿರುಗುತ್ತಿದೆ.
ಸುರಕ್ಷತಾ ಕ್ರಮ : ಸರ್ಕಾರಿ ಕಚೇರಿಗಳ ಕಾರ್ಯಚಟುವಟಿಕೆ ಸಹಜ ಸ್ಥಿತಿಗೆ ಮರಳುತ್ತಿದ್ದಂತೆ ಬಹಳಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಧಾನಸೌಧದ ನಾಲ್ಕೂ ದ್ವಾರಗಳಲ್ಲಿ ಅಧಿಕಾರಿಗಳು, ಸಿಬ್ಬಂದಿ, ಸಚಿವರು, ಶಾಸಕರು ಸೇರಿದಂತೆ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಜೊತೆಗೆ ಸ್ಯಾನಿಟೈಸರ್ ಬಳಸಲಾಗುತ್ತಿದೆ. ಅದೇ ರೀತಿ ವಿಕಾಸಸೌಧ, ಎಂ.ಎಸ್. ಬಿಲ್ಡಿಂಗ್, ವಿಶ್ವೇಶ್ವರಯ್ಯ ಗೋಪುರ ಸೇರಿದಂತೆ ಎಲ್ಲಾ ಇಲಾಖೆಗಳಲ್ಲೂ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿದೆ. ವಿಧಾನಸೌಧದ ಕಚೇರಿಗಳಲ್ಲೂ ಸ್ಯಾನಿಟೈಸರ್ ಇಡಲಾಗಿದೆ. ಎಲ್ಲಾ ಸಿಬ್ಬಂದಿಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.